ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ:ಪಲೀಸರ ಕಾರ್ಯ ಶ್ಲಾಘನೀಯ – ಸಿಎಂ

Spread the love

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದ್ದು ಅದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.

ಮಂಗಳವಾರ ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಸಿಎಂ ಮಾತನಾಡಿದರು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅವಿರತವಾಗಿ ಶ್ರಮಿಸುತ್ತಾ, ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ದಕ್ಷತೆ, ಕರ್ತವ್ಯನಿಷ್ಠೆಯನ್ನು ಈ ದಿನ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ.

ಕೋಟ್ಯಂತರ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿಕೊಟ್ಟ ಇವರೆಲ್ಲರ ತ್ಯಾಗ – ಬಲಿದಾನವು ಶಾಶ್ವತವಾಗಿ ನೆನಪಿನಲ್ಲುಳಿಯುವಂತದ್ದು ಎಂದು ಮುಖ್ಯ ಮಂತ್ರಿಗಳು ಬಣ್ಣಿಸಿದರು.

ಪೊಲೀಸ್‌ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಅನೈತಿಕ ಪೊಲೀಸ್‌ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್‌ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಅವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಅವರನ್ನೆಲ್ಲ ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ತಿಳಿಸಿದರು ‌

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.