ಚಿಕ್ಕಬಳ್ಳಾಪುರ,ಜು.2: ನಮ್ಮ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ವಾಡಿದ್ದು,5 ವರ್ಷವೂ ನಾನೇ ಸಿಎಂ ಎಂದು ಟಾಂಗ್ ನೀಡಿದ್ದಾರೆ
ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ, ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಅವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ ಎಂದು ಟೀಕಿಸಿದ್ದಾರೆ.
ಬಿಜೆಪಿಯವರು ನಂಬುತ್ತಾರೋ ಬಿಡುತ್ತಾರೊ ನಮಗೆ ಬೇಕಿಲ್ಲ.ಆದರೆ ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಕಡಕ್ಕಾಗಿ ಹೇಳಿದರು.
ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.
ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು, ಏನು ಮಾಡಿದ್ದಾರೆ,
ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.
ನಮ್ಮ 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿರದಿದ್ದರೆ ಸುಮ್ಮನೆ ಬರುತ್ತಿದ್ದರಾ ಎಂದು ಪ್ರಶ್ನಿಸಿದರು.
ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮೂಲಕ ತಿಳಿಸಬಹುದು ಒಟ್ಟಾರೆ ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಇಲ್ಲಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ, ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಿಎಂ ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಬಿಜೆಪಿಗರಿಗೆ ಟಾಂಗ್ ನೀಡಿದ ಸಿಎಂ, ಬಿಜೆಪಿ ನಮ್ಮ ಹೈ ಕಮಾಂಡ್ ಅಲ್ಲ ಎಂದು ತಿರುಗೇಟು ನೀಡಿದರು.
ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದ್ದೆಲ್ಲಾ ಸತ್ಯವಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿ ಸಮೃದ್ಧಿಯಾಗಲಿ. ಜನ ಸಂತೋಷದಿಂದಿರಲಿ ಮಾನವೀಯ ಸಮಾಜ ನಿರ್ಮಾಣವಾಗುತ್ತ ಪ್ರಯತ್ನ ಮಾಡಲಿ ಎಂದು ಸಿದ್ದರಾಮಯ್ಯ ಹಾರೈಸಿದರು.