100 ನೂತನ ಬಿಎಂಟಿಸಿ ಬಸ್ ಲೋಕಾರ್ಪಣೆ ಮಾಡಿದ ಸಿಎಂ

Spread the love

ಬೆಂಗಳೂರು: ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ
ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ಬಸ್ ಗಳನ್ನು ಬಿಎಂಟಿಸಿ ಗೆ ಸೇರ್ಪಡೆಗೊಳಿಸಿದ್ದೇವೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಹೇಳಿದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಭರವಸೆ ನೀಡಿದರು.

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ,ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದು ಸಿದ್ದು ಹೇಳಿದರು.

ಗೃಹಲಕ್ಷ್ಮಿ,ಬಡವರಿಗೆ ಅಕ್ಕಿ ಕೊಡುವ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ಬಂದಿದೆ ಎಂದು ಮುಖ್ಯ ಮಂತ್ರಿ ತಿಳಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆ ಕೆ ಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.