ಮೈಸೂರು:ಕೋಟಿಗಟ್ಟಲೇ ಆಸ್ತಿ ಮಾಡಿಟ್ಟರೆ ಮನಸ್ಸಿಗೆ ನೆಮ್ಮದಿ ಸಿಗಲಾರದು, ಅಸಹಾಯಕ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾದರೆ ಸಂತೋಷ ಸಿಗಲಿದೆ ಎಂದು ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಮುತ್ತಣ್ಣ ಹೇಳಿದರು.
ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಗುಬ್ಬಚ್ಚಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಮಂಗಳವಾರ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಉಚಿತ ನೋಟ್ ಪುಸ್ತಕ, ಲೇಖನ ಸಾಮಾಗ್ರಿ, ಊಟದ ಬ್ಯಾಗ್ ವಿತರಿಸಿ ಅವರು ಮಾತನಾಡಿದರು.

ಮಕ್ಕಳಿಗೆ ದಾನದ ರೂಪದಲ್ಲಿ ನೋಟ್ ಪುಸ್ತಕ ವಿತರಿಸುತ್ತಿಲ್ಲ, ಬದಲಾಗಿ ಭವಿಷ್ಯದಲ್ಲಿ ವಿದ್ಯಾವಂತರಾಗಿ ಸಮಾಜದಲ್ಲಿ ದೊಡ್ಡವ್ಯಕ್ತಿಗಳಾಗಿ ರೂಪುಗೊಳ್ಳಲಿ ಎಂಬ
ಉದ್ದೇಶದಿಂದ ಈ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದೆ. ಹೀಗಾಗಿ ಶಾಲಾಮಕ್ಕಳು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಭವಿಷ್ಯದಲ್ಲಿ ಅಸಹಾಯಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ವಿದ್ಯೆಯಿಂದ ಮಾತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು,ಪಾಲಕರು ಕೂಡಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸಬೇಕು, ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ಅನಾನುಕೂಲವಾದರೆ ಜೀವದಾರ ರಕ್ತ ನಿಧಿ ಕೇಂದ್ರ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಮುತ್ತಣ್ಣ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಜಿ ರಾಘವೇಂದ್ರ, ರಾಕೇಶ್,
ಮಣಿಕಂಠ,ಚಂದ್ರು, ಶಾಲೆಯ ಮುಖ್ಯ ಶಿಕ್ಷಕರಾದ ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.