ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಮಾಡಲ್ಲ-ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈ ಕಮಾಂಡ್ ನಿರ್ಧರಿಸಿದಾಗ ತಿಳಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದಾಗ ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಲಿಲ್ಲ ಎಂದು ಸ್ಪಷ್ಪಪಡಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಿದ್ದೇವೆ,ಕಾಲ್ತುಳಿತದ ಘಟನೆ ಕಾಂಗ್ರೆಸ್ ಸೇರಿದಂತೆ ಎಲ್ಲರನ್ನೂ ಆಘಾತಕ್ಕೀಡುಮಾಡಿದೆ ಹೀಗಾಗಬಾರದಿತ್ತು, ಇಂತಹ ಘಟನೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದೇವೆ ಎಂದು ಖರ್ಗೆ ತಿಳಿಸಿರ.

ಪೊಲೀಸ್ ಅಧಿಕಾರಿಗಳ ಅಮಾನತು, ಮ್ಯಾಜಿಸ್ಟ್ರೇಟ್ ತನಿಖೆ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ಮತ್ತು ನೊಂದವರಿಗೆ ಪರಿಹಾರ ಮತ್ತಿತರ ಕ್ರಮಗಳ ಬಗ್ಗೆ ಸಿಎಂ ಮತ್ತು ಡಿಸಿಎಂ ಹೈ ಕಮಾಂಡ್ ಗೆ ವಿವರಿಸಿದ್ದಾರೆ ಎಂದು ಹೇಳಿದರು.

ಜಾತಿ ಗಣತಿ ಮರು ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ,10 ವರ್ಷಗಳ ಹಿಂದೆ ಜಾತಿ ಸಮೀಕ್ಷೆ ನಡೆಸಲಾಗಿತ್ತು. ವಿವಿಧ ಸಮುದಾಯಗಳ ಅನೇಕ ಮುಖಂಡರು, ಪ್ರತಿನಿಧಿಗಳು ಮರು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಕಾಂತರಾಜ್ ಆಯೋಗ ನೀಡಿರುವ ಸಮೀಕ್ಷಾ ವರದಿಯನ್ನು ತಿರಸ್ಕರಿಸದೆ ಮರು ಸಮೀಕ್ಷೆ ನಡೆಸುವಂತೆ ಸಿಎಂ ಹಾಗೂ ಡಿಸಿಎಂಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.