ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ನಿವೃತ್ತ ಸರ್ಕಾರಿ ಅಭಿಯೋಜಕ
ಸಂಜಯ್ ಬಿ.ಭಟ್ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ
ರಮಾಕಾಂತ ಚವ್ಹಾಣ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ತೀರ್ಮಾನಿಸಲಾಗಿದೆ,ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಸಭೆಯ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ.
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಇದೇ ವೇಳೆ ತಿಳಿಸಿದರು.