ಬೆಂಗಳೂರು,ಆ.1: ಕೆ.ಆರ್.ನಗರದಲ್ಲಿ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾ. ಗಜಾನನ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ಪ್ರಕಟಿಸಿದ್ದು, ಈ ವೇಳೆ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು.
ಈ ಪ್ರಕರಣದ ಅಂತಿಮ ವಿಚಾರಣೆ ಜುಲೈ 30 ರಂದು ನಡೆದಿತ್ತು,ಸರ್ಕಾರದ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರುಗಳು ಹಾಜರಿದ್ದರು.
ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಆಗಸ್ಟ್ 1ಕ್ಕೆ ಮುಂದೂಡಿತ್ತು.
ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿತ್ತು.
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು.
ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು,ಆಕೆಯ ಹೇಳಿಕೆ ಆಧರಿಸಿ, ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಪತ್ತೆಯಾಗಿತ್ತು,ಅಲ್ಲದೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಕೂಡಾ ಸಾಬೀತಾಗಿದ್ದು,ನ್ಯಾಯಾಲಯ ಇದನ್ನೆಲ್ಲ ಪರಿಗಣಿಸಿ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ.ಆದರೆ ಇನ್ನೂ ಶಿಕ್ಷೆಯ ಪ್ರಮಾಣ ಪ್ರಕಟಿಸಿಲ್ಲ.