ಮೈಸೂರು-ತಿರುಪತಿಗೆ ಹೆಚ್ಚುವರಿ ರೈಲು ಸೇವೆ: ಕೇಂದ್ರ ಸಚಿವರಲ್ಲಿ ಯದುವೀರ್‌ ಮನವಿ

Spread the love

ಮೈಸೂರು: ಖ್ಯಾತ ಧಾರ್ಮಿಕ ಕ್ಷೇತ್ರ ತಿರುಪತಿಗೆ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಿರುವುದರಿಂದ ಹೆಚ್ಚುವರಿ ರೈಲು ಸೇವೆ ಒದಗಿಸಬೇಕು ಎಂದು ಕೇಂದ್ರ ಸಚಿವ ಅಶ್ವಿನ್‌ ವೈಷ್ಣವ್‌ ಅವರಿಗೆ ಸಂಸದ
ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿ ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್‌ ರೈಲನ್ನು ಮೈಸೂರಿನವರೆಗೆ ವಿಸ್ತರಣೆ ಮಾಡಬೇಕು ಎಂದು ಯದುವೀರ್ ಒಡೆಯರ್ ಮನವಿ ಸಲ್ಲಿಸಿದ್ದಾರೆ.

ನಂತರ‌ ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಯದುವೀರ್ ಒಡೆಯರ್,
ಆಂಧ್ರಪ್ರದೇಶದ ತಿರುಪತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ತಿರುಪತಿಗೆ ನಿರಂತರವಾಗಿ ಭೇಟಿ ನೀಡುತ್ತಿರುತ್ತಾರೆ. ಭಕ್ತರ ದೀರ್ಘಕಾಲದ ಬೇಡಿಕೆಯಂತೆ ತಿರುಪತಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ, ಅಸ್ತಿತ್ವದಲ್ಲಿರುವ ರೈಲು ಸೇವೆಗಳು ವಿರಳವಾಗಿವೆ. ಕೆಲವು ದೀರ್ಘ ಪ್ರಯಾಣದ ಅವಧಿಯದ್ದಾಗಿದೆ. ಇದರಿಂದ ಹಿರಿಯ ನಾಗರಿಕರು, ಭಕ್ತರು ಮತ್ತು ಪ್ರವಾಸಿಗರಿಗೆ ಅನಾನುಕೂಲವಾಗುತ್ತಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಮೈಸೂರು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಲಭ್ಯತೆ ಮತ್ತು ನಿರ್ವಹಣಾ ಸೌಲಭ್ಯಗಳನ್ನು ಪರಿಗಣಿಸಿ, ಮೈಸೂರು – ರೇಣಿಗುಂಟ/ತಿರುಪತಿ – ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಬಹುದಾಗಿದೆ. ಈ ನಿಟ್ಟಿನಲ್ಲಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ವಿಸ್ತರಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ.

ಈ ಅತಿ ವೇಗದ, ಆಧುನಿಕ ರೈಲು ಸೇವೆಯು ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಉತ್ತಮ ಪ್ರಯಾಣ ಆಯ್ಕೆಯನ್ನು ಒದಗಿಸುತ್ತದೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ವಿವರಿಸಿದ್ದಾರೆ.

ಮನವಿ ಪತ್ರವನ್ನು ಸ್ವೀಕರಿಸಿದ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಅವರು ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ರೈಲ್ವೆ ಸಚಿವರಿಗೆ ಕೃತಜ್ಞತೆ
ಮೈಸೂರು-ಚಾಮರಾಜನಗರ ರೈಲು ಮಾರ್ಗದ ವಿದ್ಯುದೀಕರಣವನ್ನು ತ್ವರಿತಗೊಳಿಸುವಲ್ಲಿ ರೈಲ್ವೆ ಸಚಿವರು ನೀಡಿದ ಬೆಂಬಲಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ, ಇದು ಈಗ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ದಾರಿ ಮಾಡಿಕೊಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅವರ ಸಕಾಲಿಕ ನಡೆಯು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

ತಮಿಳುನಾಡಿನ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ರಾಮೇಶ್ವರಂಗೆ ಮೈಸೂರಿನಿಂದ ಇದುವರೆಗೆ ಯಾವುದೇ ನೇರ ರೈಲು ಸಂಪರ್ಕ ಇಲ್ಲ. ಇದರಿಂದ ಮೈಸೂರು ಭಾಗದ ಜನರಿಗೆ ಈ ತೀರ್ಥ ಕ್ಷೇತ್ರಕ್ಕೆ ತೆರಳಲು ಅನನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು-ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಿಸಬೇಕೆಂದು ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಮನವಿ ಮಾಡಲಾಗಿದೆ ಎಂದು ಯದುವೀರ್‌ ಒಡೆಯರ್ ಮಾಹಿತಿ ನೀಡಿದ್ದಾರೆ.