ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿ 40 ಮೃತಪಟ್ಟಂತಾಗಿದೆ
ಈವರೆಗೆ ಇಬ್ಬರು ಸಿಐಎಸ್ಎಫ್ ಜವಾನರು ಸೇರಿ ಒಟ್ಟು 40 ಮಂದಿ ಸಾವನ್ನಪ್ಪಿದ್ದರೆ, 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 220 ಮಂದಿ ನಾಪತ್ತೆಯಾಗಿದ್ದು ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ಕಿಶ್ತ್ವಾರದ ಚಶೋತಿಯಲ್ಲಿರುವ ಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ದುರಂತ ಸಂಭವಿಸಿದ್ದು, ಭಕ್ತರು ತೀರ್ಥಯಾತ್ರೆ ಕೈಗೊಳ್ಳುವ ಹಾದಿ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಯಾತ್ರಿಕರನ್ನ ಸ್ಥಳಾಂತರ ಮಾಡಲಾಗುತ್ತಿದೆ.
ಮೇಘಸ್ಫೋಟವಾದ ಪ್ರದೇಶಕ್ಕೆ ಎರಡು ತಂಡಗಳನ್ನು ರವಾನಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ತಿಳಿಸಿದೆ.
ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಸಂಸದರೂ ಆಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾತನಾಡಿ, ಮೇಘಸ್ಫೋಟವು ಭಾರೀ ಪ್ರಮಾಣದಲ್ಲಿ ಸಂಭವಿಸಿದೆ, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು. ವೈದ್ಯಕೀಯ ಚಿಕಿತ್ಸೆಗಾಗಿ ಆಡಳಿತವು ಹೆಲಿ-ರಕ್ಷಣಾ ವ್ಯವಸ್ಥೆಗಳನ್ನು ಸಹ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದು
ದುರಂತ ನೆನೆದು ಮೃತರಿಗೆ ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಕಿಶ್ತ್ವಾರ್‌ನಲ್ಲಿ ಮೇಘಸ್ಫೋಟದಿಂದ ಉಂಟಾದ ದುರಂತದ ಹಿನ್ನೆಲೆಯಲ್ಲಿ, ನಾಳೆ ಸಂಜೆ ʻಅಟ್ ಹೋಮ್ʼ ಟೀ ಪಾರ್ಟಿಯನ್ನ ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಬೆಳಗಿನ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ರದ್ದು ಮಾಡಲು ನಿರ್ಧರಿಸಿದ್ದು, ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ನಡೆಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.