ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ,ರಾಷ್ಟ್ರ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆ ಅಪಾರ: ಸಿಎಂ

Spread the love

ಬೆಂಗಳೂರು: ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ ಮತ್ತು ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಶ್ಲಾಘಿಸಿದರು.

ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ,ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ ವ್ಯಕ್ತಪಡಿಸಿದರು.ಜತೆಗೆ ಈ ಅಸಮಾನತೆ ಅಳಿಸಲು ಗ್ಯಾರಂಟಿ‌ ಯೋಜನೆಗಳು ಸಹಕಾರಿಯಾಗಿದ್ದು ಯಶಸ್ವಿಯಾಗಿವೆ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರೀತಿಯ ನಾಡ ಬಾಂಧವರೆ ಎಂದು ಭಾಷಣ ಪ್ರಾರಂಭಿಸಿದ ಸಿಎಂ,ಭಾರತದ 79ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಮಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಬಯಸುತ್ತೇನೆ ಎಂದು ನುಡಿದರು.

ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ ಮಖ್ಯಮಂತ್ರಿಗಳು,ಸಣ್ಣಪುಟ್ಟ ಉದ್ಯಮ ಮಾಡುತ್ತಾ ಜೀವನ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯ ದಿಕ್ಕಿನಲ್ಲಿ ನಮ್ಮ ಹೆಜ್ಜೆಗಳು ಧೃಡವಾಗಿವೆ ಎಂದು ಹೇಳಿದರು.

ದೇಶವನ್ನು ದಾಸ್ಯದಿಂದ ಬಿಡುಗಡೆಗೊಳಿಸಲು ನಡೆದ ದೀರ್ಘಕಾಲದ ಹೋರಾಟದಲ್ಲಿ ಭಾಗವಹಿಸಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭ ಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಮುಂತಾದ ಎಲ್ಲಾ ಅಮರ ವೀರರನ್ನು ಧನ್ಯತಾಭಾವದಿಂದ ಸ್ಮರಿಸೋಣ ಅವರಿಗೆ ನಮಿಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ದೋಂಡಿಯಾ ವಾಘ, ಹಲಗಲಿಯ ವೀರ ಬೇಡರು, ಮೈಲಾರ ಮಹಾದೇವಪ್ಪ, ಬೂದಿ ಬಸಪ್ಪ ನಾಯಕ ಮುಂತಾದವರು ಹಾಗೂ ಶ್ರೀರಂಗಪಟ್ಟಣ, ಸುರಪುರ, ಕಿತ್ತೂರು, ಈಸೂರು, ವಿಧುರಾಶ್ವತ್ಥ, ಶಿವಪುರ, ಅಂಕೋಲ ಮುಂತಾದ ಸ್ಥಳಗಳು ಬ್ರಿಟೀಷರನ್ನು ನಡುಗಿಸಿದ್ದವು. ಲಕ್ಷಾಂತರ ಜನರು ಸಕ್ರಿಯವಾಗಿ ಭಾಗವಹಿಸಿದ್ದರಲ್ಲದೆ ಸಾವಿರಾರು ಜನರು ಜೀವ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ಗೌರವಿಸೋಣ ಎಂದು ಹೇಳಿದರು.

ಸ್ವಾತಂತ್ರ್ಯಾನಂತರ ದೇಶದ ರಕ್ಷಣೆಗಾಗಿ ನಡೆದ ಯುದ್ಧಗಳಲ್ಲಿ, ಸಂಘರ್ಷಗಳಲ್ಲಿ ಅಸಂಖ್ಯಾತ ಸೈನಿಕರು ಹುತಾತ್ಮರಾಗಿದ್ದಾರೆ. ಪ್ರಧಾನ ಮಂತ್ರಿಗಳಾಗಿದ್ದವರು ಸಹ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಕಟ್ಟಿ ಬೆಳೆಸುವ ಕೈಂಕರ್ಯದಲ್ಲಿ ಅಸಂಖ್ಯಾತ ಕಾರ್ಮಿಕರು, ರೈತರು, ವಿದ್ವಾಂಸರು, ವಿಜ್ಞಾನಿಗಳು, ಶಿಕ್ಷಕರು, ಹೋರಾಟಗಾರರೂ ಸೇರಿದಂತೆ ಸಮಸ್ತ ಉತ್ಪಾದಕ ವರ್ಗಗಳ ಜನರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಅವರೆಲ್ಲರನ್ನು ಈ ಸುಸಂದರ್ಭದಲ್ಲಿ ಸ್ಮರಿಸಲೇಬೇಕಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ತಾನೆ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮಡಿದವರು ಹಾಗೂ ಆ ನಂತರದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಎಲ್ಲರನ್ನೂ ಋಣಪೂರ್ವಕವಾಗಿ ದೇಶವು ನೆನಪಿಡುತ್ತದೆ. ಅವರೆಲ್ಲರ ಧೀರೋದಾತ್ತ ಹೋರಾಟವನ್ನು ವಿನೀತ ಭಾವದಿಂದ ತಲೆಬಾಗಿ ಗೌರವಿಸುತ್ತದೆ.

ನಮ್ಮ ಹೆಮ್ಮೆಯ ನವಭಾರತದ ನಿರ್ಮಾಣದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ ಮಹಾನ್ ವ್ಯಕ್ತಿಗಳ ಮಾತುಗಳನ್ನು ನೆನಪಿಸಿಕೊಳ್ಳುವುದು ಈ ಸಂದರ್ಭದಲ್ಲಿ ಔಚಿತ್ಯಪೂರ್ಣ ಎನ್ನಿಸಿದೆ.

ನುಡಿದಂತೆ ನಡೆಯಬೇಕು ಎಂಬುದು 12ನೇ ಶತಮಾನದ ಬಸವಾದಿ ಶರಣರ ನಿಶ್ಚಲ ನಿಲುವು. ನಮ್ಮ ಸರ್ಕಾರ ಈ ಧ್ಯೇಯ ವಾಕ್ಯದಲ್ಲಿ ನಂಬಿಕೆಯಿಟ್ಟು ರಾಜ್ಯವು ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ ‘ಕರ್ನಾಟಕ ಅಭಿವೃದ್ಧಿ ಮಾದರಿ’ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಫಿಲೆಮಾನ್ ಯಾಂಗ್ರವರು ಕರ್ನಾಟಕಕ್ಕೆ ಬಂದು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಮೂಲಕ ನಮ್ಮ ಯೋಜನೆಗಳು ವಿಶ್ವಮಾನ್ಯಗೊಂಡಿವೆ ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.

ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯನ್ನು ಪ್ರಾರಂಭಿಸಿ ಈ ವರ್ಷ 8,000 ಕೋಟಿ ರೂ.ಗಳನ್ನು ನೀಡುತ್ತಿದ್ದೇವೆ.

ಅತ್ಯುನ್ನತ ಸ್ವಾತಂತ್ರ್ಯ ಕರ್ನಾಟಕ ರಾಜ್ಯ ಈಗಾಗಲೇ ಭಾರತದ ಐಟಿ ರಾಜಧಾನಿಯಾಗಿದೆ ಮತ್ತು ಈಗ ನಾವು ಜಗತ್ತಿನ ನಾವೀನ್ಯತಾ ರಾಜಧಾನಿ ಯಾಗುವತ್ತ ಹೆಜ್ಜೆ ಇರಿಸಿದ್ದೇವೆ,
ನಾವು ಕ್ವಾಂಟಮ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ನವೀಕರಿಸಬಹುದಾದ ಇಂಧನ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದ್ದೇವೆ. ದೇಶದ ಮೊದಲ ಕ್ವಾಂಟಮ್ ಕಂಪ್ಯೂಟರ್ ಕರ್ನಾಟಕದಲ್ಲಿದೆ. ನಮ್ಮ `ಕರ್ನಾಟಕ ಕ್ವಾಂಟಮ್ ಮಿಷನ್’ ವಿಜ್ಞಾನದ ಭವಿಷ್ಯವನ್ನು ರೂಪಿಸಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ನಮ್ಮ ಸರ್ಕಾರವು ಪ್ರೊ.ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದೆ. ಆ ಸಮಿತಿಯು ವರದಿಯನ್ನು ನೀಡಿದ ಕೂಡಲೆ ಅದನ್ನು ಅನುಷ್ಠಾನ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ನಮ್ಮ ಹೊಸ ತಲೆಮಾರು ಮೊಬೈಲ್ ಫೋನು, ಇಂಟರ್ ನೆಟ್ ಮುಂತಾದವುಗಳ ಭರಾಟೆಯಲ್ಲಿ ವಿಪರೀತ ತಲ್ಲಣಗಳನ್ನು ಎದುರಿಸುತ್ತಿದೆ. ಖಿನ್ನತೆ, ಆತಂಕ, ವಿನಾಕಾರಣ ಸಿಟ್ಟು, ದ್ವೇಷ ಮುಂತಾದ ಭಾವನೆಗಳಲ್ಲಿ ಸಿಲುಕಿ ಸಂಕಷ್ಟ ಪಡುತ್ತಿದೆ. ಈ ಸಾಮಾಜಿಕ ಸಮಸ್ಯೆಯನ್ನು ಹೋಗಲಾಡಿಸಲು ನಾವೆಲ್ಲರೂ ಸೇರಿ ಹೊಸ ದಾರಿಗಳನ್ನು ಹುಡುಕಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ನಾವು ಮೊಬೈಲ್ ಬಿಡಿ – ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ ಎಂಬ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವೆಂದು ಘೋಷಿಸಿದ್ದೇವೆ. ಹಾಗೆಯೇ ನಾವೆಲ್ಲರೂ ನಮ್ಮ ಹೆಮ್ಮೆಯ ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ. ಈ ಹೋರಾಟದಲ್ಲಿ ಪ್ರತಿ ಪ್ರಜೆಯೂ ಯೋಧರಂತೆ ಕೆಲಸ ಮಾಡಬೇಕಾಗಿದೆ. ಸರ್ಕಾರವು ಈಗಾಗಲೇ ಈ ವಿಚಾರದಲ್ಲಿ ಸಕಲ ಆಯಾಮಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಾಮರಸ್ಯದಿಂದ ಕೂಡಿದ ಸಮೃದ್ಧ ಕರ್ನಾಟಕವನ್ನು ನಿರ್ಮಾಣ ಮಾಡುವುದರ ಮೂಲಕ ಸಶಕ್ತ ಭಾರತವನ್ನು ಕಟ್ಟೋಣ. ಸ್ವಾತಂತ್ರ್ಯ, ಸಂವಿಧಾನ ಹಾಗೂ ನೈಜ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವಕ್ಕಿಂತ ಮಿಗಿಲು ಎಂದು ಭಾವಿಸೋಣ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ನ್ಯಾಯಗಳನ್ನು ನಿರಂತರವಾಗಿ ರಕ್ಷಿಸಿಕೊಳ್ಳುವ ಪ್ರತಿಜ್ಞೆ ಮಾಡಿ ಈ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣಗೊಳಿಸೋಣ ಎಂದು ಸಿಎಂ ಜನತೆಗೆ ಕರೆ ನೀಡಿದರು.