ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಮೈಸೂರಿಗೆ ಆಗಮಿಸಲಿದ್ದಾರೆ.
ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎ ಐ ಐ ಎಸ್ ಹೆಚ್) ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿಗಳು ಆಗಮಿಸಲಿದ್ದಾರೆ.
ಹಾಗಾಗಿ ಯಾವುದೇ ಲೋಪವಾಗದಂತೆ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ ಅವರು ಸೂಚಿಸಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಗಮನದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಸನ್ ಬ್ಲೂ ನಲ್ಲಿ ವಾಸ್ತವ್ಯ ಮಾಡುವರು.ಆದ್ದರಿಂದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು. ರಾಷ್ಟ್ರಪತಿಗಳು ಸಂಚರಿಸುವ ರಸ್ತೆ ಸಂಪೂರ್ಣವಾಗಿ ದುರಸ್ತಿಗೊಳಿಸಬೇಕು. ರಿಂಗ್ ರೋಡ್, ಆಯುಷ್ ನಿಂದ ರಾಡಿಷನ್ ಬ್ಲೂ ವರೆಗಿನ ರಸ್ತೆಗಳ ಸ್ವಚ್ಚತೆಗೆ ನಗರಪಾಲಿಕೆ, ಮುಡಾ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ಹೆಳಿದರು.
ರಾಷ್ಟ್ರಪತಿಗಳಿಗೆ ಶಿಷ್ಟಾಚಾರದಂತೆ ವೈದ್ಯಕೀಯ ವ್ಯವಸ್ಥೆ ಒದಗಿಸುವುದು ಆರೋಗ್ಯ ಇಲಾಖೆ ಜವಾಬ್ದಾರಿ. ಸೂಕ್ತ ವ್ಯವಸ್ಥೆಯುಳ್ಳ ಆಂಬ್ಯುಲೆನ್ಸ್, ತಜ್ಞ ವೈದ್ಯರು ಹಾಗೂ ಸಿಬ್ಬಂದಿ ನಿಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ, ಡಿಸಿಪಿ ಸುಂದರ ರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.