ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಈ ಸೂಚನೆ ನೀಡಿದರು.
ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು.
ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು,ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.