ನವದೆಹಲಿ: ಎನ್ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಅವರ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರು 300 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.
ಫಲಿತಾಂಶಗಳನ್ನು ಪ್ರಕಟಿಸಿದ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು, ರಾಧಾಕೃಷ್ಣನ್ ಅವರು ವಿರೋಧ ಪಕ್ಷದ ಅಭ್ಯರ್ಥಿ ನ್ಯಾಯಮೂರ್ತಿ(ನಿವೃತ್ತ) ಸುದರ್ಶನ್ ರೆಡ್ಡಿ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು ಪ್ರಕಟಿಸಿದರು.
ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ,ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವು ಗಣ್ಯರು ಮತದಾನ ಮಾಡಿದರು
ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಮತ್ತು ಎರಡು ಬಾರಿ ಲೋಕಸಭಾ ಸಂಸದರಾಗಿದ್ದ ರಾಧಾಕೃಷ್ಣನ್ ಅವರು ಈಗ ದೇಶದ 15ನೇ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿತ್ತು.ಸೆ.12 ರಂದು ರಾಧಾಕೃಷ್ಣನ್ ಅಧಿಕಾರ ಸ್ವೀಕರಿಸಲಿದ್ದಾರೆ.