ಬೆಂಗಳೂರು: ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಒಪ್ಪಿಗೆ ನೀಡಿದೆ.
ಅಲ್ಲದೆ, ಜನ ಪ್ರತಿನಿಧಿಗಳ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ.ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಅವರು ರಾಜೀನಾಮೆ ಕೊಡದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ಅವರು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಜೆಡಿಎಸ್ ನಗರ ಘಟಕದ ಪದಾಧಿಕಾರಿಗಳು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಮತ್ತಿತರ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.