ಬಡವರ ಕೆಲಸಗಳನ್ನು ಸ್ವಯಂ ಪ್ರೇರಿತವಾಗಿ ನಿರ್ವಹಿಸಿ: ಕೃಷ್ಣ ಭೈರೇಗೌಡ ಸೂಚನೆ

ಮೈಸೂರು: ಕಂದಾಯ ಇಲಾಖೆಯಲ್ಲಿ ರೈತರು ಹಾಗೂ ಬಡವರ ಕೆಲಸ ಹೆಚ್ಚಾಗಿದ್ದು, ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ಕೆಲಸ ನಿರ್ವಹಿಸಿ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ‌ ಹಮ್ಮಿಕೊಂಡಿದ್ದ ಸಭೆಯಲ್ಲಿ‌ ಸಚಿವರು ಈ ಸೂಚನೆ ನೀಡಿದರು‌.

ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ 163 ಗ್ರಾಮಗಳನ್ನು ಗುರುತಿಸಲಾಗಿತ್ತು. ಜಿಲ್ಲಾಧಿಕಾರಿಗಳಿಂದ 129 ಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, 107 ಗ್ರಾಮಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನುಳಿದ ಗ್ರಾಮಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹೋಬಳಿವಾರು ದರಖಾಸ್ತು ಪೋಡಿ ಬಾಕಿ ಇರುವ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿದ ಸಚಿವರು ಕೆಲಸಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ದರಖಾಸ್ತು ಪೋಡಿಗೆ 3215 ಗುರಿ ನಿಗದಿಯಾಗಿದ್ದು, ನವೆಂಬರ್ 21 ರೊಳಗೆ 2000 ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ವಿಶೇಷ ಉಪವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಬಗ್ಗೆ ಸಭೆಗೆ ವಿವರಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ. ಎನ್.ಮಂಜೇಗೌಡ, ಡಾ. ಡಿ ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ , ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.