ಪವಿತ್ರಾ ಗೌಡ ಅರ್ಜಿ ವಜಾ

ನವದೆಹಲಿ: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿರುವ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದ್ದನ್ನು ಬದಿಗೆ ಸರಿಸಿ ಆಗಸ್ಟ್‌ 14ರಂದು ಮಾಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್‌ ಮಹಾದೇವನ್‌ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಪವಿತ್ರಾ ಗೌಡ, ನಟ ದರ್ಶನ್‌ ಸೇರಿದಂತೆ ಏಳು ಮಂದಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು 14-8-2025ರಂದು ಪುರಸ್ಕರಿಸಲಾಗಿತ್ತು.

ಈ ತೀರ್ಪು ಮತ್ತು ಸಂಬಂಧಿತ ದಾಖಲೆಗಳನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಲಾಗಿದೆ.ಹಾಗಾಗಿ ಆ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ,ಆದ್ದರಿಂದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.