ಮಾದಕ ವಸ್ತು ಮುಕ್ತ ಜಿಲ್ಲೆ ಮಾಡಲು ಅಧಿಕಾರಿಗಳು ಕೈ ಜೋಡಿಸಿ: ನಾಗೇಶ್

ಮೈಸೂರು: ಮಾದಕ ವಸ್ತುಗಳ ಸರಬರಾಜು ತಡೆಗಟ್ಟಲು ಹಾಗೂ ಮಾದಕ ವಸ್ತುಗಳ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾಗೇಶ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮಿಕೊಳ್ಳಲಾಗಿದ್ದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಿಂದೆ ಮದ್ಯಪಾನವನ್ನು ಊರಿನ ಹೊರಭಾಗದಲ್ಲಿ ಮಾರಾಟ ಮಾಡಲಾಗುತ್ತಿತ್ತು, ಇಂದು ಊರಿನ ಒಳಗೆ ಮಾರಾಟ ಮಾಡುತ್ತಿದ್ದಾರೆ. ನಾರ್ಕೋಟಿಕ್ ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಮಾರಾಟ ಜಾಲವನ್ನು ಮಟ್ಟ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ನಮ್ಮ ಮನೆಗಳನ್ನೇ ಆವರಿಸಬಹುದು. ಸಾರ್ವಜನಿಕರು ಇದರ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ಮಾದಕ ವಸ್ತುಗಳ ಸೇವನೆ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿದ್ದು, ಅವರ ಮೇಲೆ ಪ್ರಭಾವ ಬೀರುತ್ತಿರುವುದರಿಂದ ಕಾಲೇಜು ಶಿಕ್ಷಣ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಾಲೇಜುಗಳ ಸುತ್ತಮುತ್ತ ಸಿ ಸಿ ಟಿವಿಗಳನ್ನು ಅಳವಡಿಸಿ ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ನಿಗಾವಹಿಸಬೇಕು. ಕಾಲೇಜುಗಳ ಸುತ್ತ ಮುತ್ತ ಮಾದಕ ವಸ್ತುಗಳಿಂದಾಗುವ ದುಷ್ಟಪರಿಣಾಮಗಳ ಬಗ್ಗೆ ಮಾಹಿತಿ ಇರುವ ಬ್ಯಾನರ್ ಗಳನ್ನ ಅಳವಡಿಸಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಹಾಸ್ಟೆಲ್ ಗಳ ಸುತ್ತ ಮುತ್ತ ಸಿ. ಸಿ ಟಿವಿಯನ್ನು ಅಳವಡಿಸಿ ಅವುಗಳನ್ನು ಪರಿಶೀಲಿಸಬೇಕು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಹಾಸ್ಟೆಲ್ ಗಳ ಸುತ್ತ ಸಂಶಯಾಸ್ಪದವಾಗಿ ಓಡಾಡುತ್ತಿರುವುದು ತಿಳಿದುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ತಿಳಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಮ್ಮ ವ್ಯಾಪಿಗೆ ಬರುವಂತಹ ಎಲ್ಲಾ ಆಸ್ಪತ್ರೆಗಳಿಗೂ ಭೇಟಿ ನೀಡಿ ಪರಿಶೀಲನೆ ಮಾಡಬೇಕು.

ಔಷಧ ನಿಯಂತ್ರಣಾಧಿಕಾರಿಗಳು ಮೆಡಿಕಲ್ ಸ್ಟೋರ್ ಗಳಲ್ಲಿ ಕಾನೂನು ಬಾಹಿರವಾಗಿ ಡ್ರಗ್ಸ್ ಸರಬರಾಜು ಆಗದಂತೆ ಹಾಗೂ ಡ್ರಗ್ಸ್ ನಿಯಂತ್ರಣದ ಬಗ್ಗೆ ಕ್ರಮ ವಹಿಸಿ, ಅನಿರೀಕ್ಷಿತ ವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಹೇಳಿದರು.

ಅರಣ್ಯ ಇಲಾಖೆ ಮತ್ತು ಕೃಷಿ ಇಲಾಖೆಯವರು ಕಾಡಂಚಿನ ಗ್ರಾಮಗಳು ಹಾಗೂ ಹಾಡಿಗಳಲ್ಲಿ, ಗಾಂಜಾ ಬೆಳೆಯುತ್ತಿರುವ ಬಗ್ಗೆ ಪರಿಶೀಲನೆ ಮಾಡಿ ಮಾಹಿತಿಯನ್ನು ಪಡೆದುಕೊಂಡು ಪೊಲೀಸರಿಗೆ ವರದಿ ನೀಡಬೇಕು.

ಮೈಸೂರು ಜಿಲ್ಲೆಯಲ್ಲಿ ಇರುವ ಕೇಂದ್ರ ಕಾರಾಗೃಹ ಹಾಗೂ ಉಪ ಕಾರಾಗೃಹಗಳಿಗೆ ಅನಿರೀಕ್ಷಿತ ಭೇಟಿ ನೀಡಬೇಕು. ಕಾರಗೃಹದಲ್ಲಿ ಇರುವ ಬಂಧಿಗಳಿಗೆ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು.

ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮಾದಕ ವಸ್ತುಗಳು ಸರಬರಾಜು ಆಗದಂತೆ ಕ್ರಮ ವಹಿಸಬೇಕು. ಸರಕು ಸಾಗಾಣಿಕೆ ಗೂಡ್ಸ್ ಗಳನ್ನು ಸರಕು ಮತ್ತು ಸೇವಾ ತೆರಿಗೆ ಇಲಾಖೆಯವರು ಪಾರ್ಸಲ್ ಗಳಲ್ಲಿ ಮಾದಕ ವಸ್ತುಗಳ ಸಾಗಾಣಿಕೆಯಾಗುತ್ತಿರುವುದರ ಬಗ್ಗೆ ಮಾಹಿತಿ ಕಂಡುಬಂದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಕ್ರಮ ವಹಿಸಿ ವರದಿ ನೀಡಬೇಕು ಎಂದು ನಾಗೇಶ್ ಸೂಚಿಸಿದರು.

ಸಭೆಯಲ್ಲಿ ಎಎಸ್ಐ ನಾಗರಾಜ್ ನಾಯಕ್, ಸೈಬರ್ ಕ್ರೈಂ ವಿಭಾಗದ ಮನೋಜ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.