ಬೆಂಗಳೂರು: ಇತ್ತೀಚೆಗೆ ಬಿಡುಗಡೆ ಯಾಗಿರುವ ಟಾಕ್ಸಿಕ್ ಚಲನಚಿತ್ರದ ಟೀಸರ್ ಅನ್ನು ಕೂಡಲೆ ರದ್ದುಗೊಳಿಸಬೇಕೆಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿತು.
ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ ನಂತರ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ಈ ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳು ಹೆಂಗಳೆಯರ ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿದ್ದು ಕನ್ನಡದ ಐತಿಹಾಸಿಕ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ತೀವ್ರ ಅಪಮಾನವಾಗಿದೆ ಎಂದು ಕಿಡಿಕಾರಿದರು.
ಸಮಾಜದ ಮೇಲೆ ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ಇದು ಗಂಭೀರ ದುಷ್ಪರಿಣಾಮಗಳನ್ನು ಬೀರುತ್ತಿದೆ. ರಾಜ್ಯ ಮಹಿಳಾ ಆಯೋಗವು ಈ ಕೂಡಲೇ ಮಧ್ಯಪ್ರವೇಶಿಸಬೇಕು ಹಾಗೂ ಈ ಟೀಸರ್ ಕೂಡಲೇ ರದ್ದುಗೊಳಿಸಲು ಮತ್ತು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ರಾಜ್ಯ ಸರ್ಕಾರಕ್ಕೆ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ನಮ್ಮ ನಾಡಿನ ಮಹಿಳೆಯರ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿರುವ ಮಹಿಳಾ ಆಯೋಗವು ಕೂಡಲೇ ಕ್ರಮಕ್ಕೆ ಮುಂದಾಗಬೇಕು ಸರ್ಕಾರ ಸಹ ಈ ಬಗ್ಗೆ ಕಠಿಣ ಕಾನೂನುಗಳನ್ನು ರೂಪಿಸಬೇಕು ಎಂದು ಉಷಾ ಮೋಹನ್ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮುಖಂಡಯರಾದ ವೀಣಾ ಸರ್ರಾವ್, ಜ್ಯೋತಿ ಮತ್ತಿತರ ಮಹಿಳಾ ಮುಖಂಡರು ಹಾಜರಿದ್ದರು.
