ತುಮಕೂರು: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ 2025 -2026 ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಸಿಎಂ,ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಸಿಎಂ ಶುಭ ಕೋರಿದರು.
ವಿದ್ಯಾರ್ಥಿ ದೆಸೆಯಲ್ಲಿ ನಾನೂ ಕೂಡಾ ಕ್ರೀಡಾಪಟುವಾಗಿದ್ದೆ,ಕ್ರೀಡೆಯಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆ ಪಾಲನೆಗೆ ಸಹಕಾರಿ ತಿಳಿಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿ ಗೃಹ ಸಚಿವ ಜಿ.ಪರಮೇಶ್ವರ್ ಎಂದು ಸಿಎಂ ಅಭಿನಂದಿಸಿದರು.
ತಾನು ವಿದ್ಯಾರ್ಥಿದೆಸೆಯಲ್ಲಿ ಕಬ್ಬಡ್ಡಿ ಪಟುವಾಗಿದ್ದೆ, ಅದರೊಂದಿಗೆ ಫುಟ್ ಬಾಲ್, ಕ್ರಿಕೆಟ್ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದೇನೆ, ಏಕದಿನ ಕ್ರಿಕೆಟ್,ಟಿ-20 ಕ್ರಿಕೆಟ್ ವೀಕ್ಷಿಸುವ ಹವ್ಯಾಸವಿದೆ, ತನ್ನ ಕೆಲಸದೊತ್ತಡದ ನಡುವೆಯೂ ಅಂತರರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ.ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ ಎಂದು ಸಿಎಂ ಸಲಹೆ ನೀಡಿದರು.
ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನಿಯಮವನ್ನು ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಪೇದೆ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯ ವರೆಗೆ ಶೇ.3 ರಷ್ಟು ಮೀಸಲಾತಿಯನ್ನು ಸರ್ಕಾರ ನೀಡುತ್ತಿದೆ. ಒಲಂಪಿಕ್ಸ್ , ಪ್ಯಾರಾ ಒಲಂಪಿಕ್ಸ್ , ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ರಾಷ್ಟ್ರೀಯ,ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ,
ಭಾಗವಹಿಸುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಲ್ಲಿ ಶೇ.2 ರ ಮೀಸಲಾತಿಯನ್ನು ನೀಡಲಾಗುತ್ತಿದೆ. ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
