ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಾರ್ಕಾಳದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಉದ್ಯೋಗ ಒದಗಿಸುವ ಭರವಸೆ ನೀಡುತ್ತೇವೆ, ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ,ಈ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚಾಗಿದೆ ಎಂಬ ಪ್ರಶ್ನೆಗೆ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಉತ್ತರಿಸಿದರು.
ಅಪ್ರಾಪ್ತರಲ್ಲಿ ಗಾಂಜಾ ಸೇವನೆ ವ್ಯಾಪಕವಾಗುತ್ತಿದೆ ಎಂಬ ಬಗ್ಗೆ ಸಿಎಂ ಗಮನ ಸೆಳೆದಾಗ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ಶಾಸಕರು ಸಚಿವರಾಗಬಯಸುವುದು ತಪ್ಪೇನಲ್ಲ,ಆದರೆ ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
