ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ, ಗುಡುಮಾದನಹಳ್ಳಿಯಲ್ಲಿ ರಾಜ್ಯ ಸರ್ಕಾರ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ರೈತರು ಆಸ್ಪತ್ರೆ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಂಡವಪುರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗಿಯಾಗಿ ತಾವು ರೈತರ ಪರ ಎಂದು ಹೇಳಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಗುಡುಮಾದನಹಳ್ಳಿ ರೈತರು, ಯಾವುದೇ ಕಾರಣಕ್ಕೂ ಕೃಷಿ ಜಮೀನಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡುವುದು ಬೇಡ ಎಂದು ಪಟ್ಟು ಹಿಡಿದಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಪುಟ್ಟಣ್ಣಯ್ಯ, ಸ್ಥಳೀಯ ರೈತರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಅನೇಕ ರೈತ ಮುಖಂಡರು ಹಾಜರಿದ್ದರು.
