ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನೀಟ್ ಮರು ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಗೊಂದಲ, ಲೋಪಕ್ಕೆ ಅವಕಾಶ ನೀಡದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಐಶ್ವರ್ಯ ಆದೇಶಿಸಿದರು.
ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್ ಮಿಥಿಲೇಶ್ ಕುಮಾರ್ ಮಾತನಾಡಿ, ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ತಪಾಸಣೆ ಹಾಗೂ ಬಯೋಮೆಟ್ರಿಕ್ ಪರಿಶೀಲನೆ ಆರಂಭವಾಗಲಿದೆ. ಮಧ್ಯಾಹ್ನ 1.30 ರ ನಂತರ ಬರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಪೊಲೀಸ್ ವೃತ್ತ ನಿರೀಕ್ಷಕರು, ಮೂವರು ಪುರುಷ ಹಾಗೂ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋ ಬಸ್ತ್ ಕಲ್ಪಿಸಲಾಗುವುದು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶುಚಿತ್ವ ಕಾಪಾಡಲು ಮಹಾನಗರ ಪಾಲಿಕೆಗೆ, ವಿದ್ಯಾರ್ಥಿಗಳ ಆರೋಗ್ಯ ತುರ್ತು ಸೇವೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆಗೆ, ಹೆಚ್ಚುವರಿ ಬಸ್ ವ್ಯವಸ್ಥೆಗೆ ಕೆಎಸ್ಆರ್ಟಿಸಿಗೆ, ನಿರಂತರ ವಿದ್ಯುತ್ ಪೂರೈಕೆಗೆ ಸೆಸ್ಕ್ಗೆ ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ವಿಕಲಚೇತನ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಗಾಲಿಕುರ್ಚಿ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸಲು ಸೂಚಿಸಲಾಯಿತು.
ಮೈಸೂರಿನ 21 ನೀಟ್ ಪರೀಕ್ಷಾ ಕೇಂದ್ರಗಳು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಜಿ.ಕೊಪ್ಪಲು
ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್
ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜು
ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು
ಮಹಾರಾಣಿ ಮಹಿಳಾ ಕಲಾ ಕಾಲೇಜು
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ವಿಜಯನಗರ
ಸರ್ಕಾರಿ ಪದವಿ ಪೂರ್ವ ಕಾಲೇಜು, ಒಂಟಿಕೊಪ್ಪಲು
ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು
ಸರ್ಕಾರಿ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜು
ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು
ಸರ್ಕಾರಿ ಪದವಿಪೂರ್ವ ಕಾಲೇಜು, ಕುವೆಂಪು ನಗರ
ಸರ್ಕಾರಿ ಆದರ್ಶ ವಿದ್ಯಾಲಯ, ಜಾಕಿ ಕ್ವಾರ್ಟರ್ಸ್
ಬೈಫರ್ಕೆಟೆಡ್ ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು, ನಜರ್ಬಾದ್
ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ
ಮಹಾರಾಜ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ
ಸರ್ಕಾರಿ ಪದವಿಪೂರ್ವ ಕಾಲೇಜು, ಅನಿಕೇತನ ರಸ್ತೆ, ಕುವೆಂಪು ನಗರ
ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜು, ದೇವರಾಜ ಮೊಹಲ್ಲಾ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ದಾರ್ಥ ಲೇಔಟ್
ಡೆಮಾಂನ್ಸ್ಟ್ರೇಷನ್ ಸ್ಕೂಲ್ ಮೈಸೂರು.
ಸಭೆಯಲ್ಲಿ ನೀಟ್ ಪರೀಕ್ಷೆಯ ಕೋ ಆರ್ಡಿನೇಟರ್ ಡಾ. ಎನ್.ಆರ್. ಶ್ರೀನಾಥ್, ಶಿಷ್ಠಾಚಾರ ತಹಸಿಲ್ದಾರ್ ಶಿವಪ್ರಸಾದ್, ಅಗ್ನಿಶಾಮಕ ಅಧಿಕಾರಿ ಗುರುರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
