ನಂಜನಗೂಡು: ನಂಜನಗೂಡಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸ್ವಯಂಸೇವಕರಿಗೆ ಪೂರ್ವಭಾವಿ ತರಬೇತಿ
ನೀಡಲಾಯಿತು.
ಪಲ್ಸ್ ಪೋಲಿಯೋ ಅಭಿಯಾನವನ್ನು ಯಶಸ್ವಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸ್ವಯಂಸೇವಕರಿಗೆ ಪೂರ್ವಭಾವಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಈಶ್ವರ್ ಬಿ ಕನೆಟ್ಕಿ ಅವರು, ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.
ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಯಧು ಗಿರೀಶ್ ಅವರು ತರಬೇತಿಯಲ್ಲಿ ಪೋಲಿಯೋ ಲಸಿಕೆ ನೀಡುವ ವಿಧಾನ, ಲಸಿಕೆ ಸಂಗ್ರಹಣೆ, ಮಕ್ಕಳ ಗುರುತಿಸುವಿಕೆ, ಮನೆ,ಮನೆ ಭೇಟಿ ವೇಳೆ ಅನುಸರಿಸಬೇಕಾದ ಕ್ರಮಗಳು, ದಾಖಲಾತಿ ನಿರ್ವಹಣೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ವೇಳೆ ಲಸಿಕೆ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಮತ್ತು ಪೋಷಕರನ್ನು ಪ್ರೋತ್ಸಾಹಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು.
ಆರೋಗ್ಯ ನಿರೀಕ್ಷಣಾಧಿಕಾರಿ ನಯನ ಆರ್ ಅವರು ತರಬೇತಿ ನೀಡಿ ಸ್ವಯಂಸೇವಕರು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ಸರ್ವೇಶ್ ಕುಮಾರ್,
ಆಶಾ ಮೇಲ್ವಿಚಾರಕರಾದ ಶಶಿಕಲಾ, ತರಬೇತಿ ಉಪನ್ಯಾಸಕರಾದ ನಾಗವೇಣಿ,ನಟರಾಜು,ದೇವಿಕಾ ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.
ತರಬೇತಿ ಕಾರ್ಯಗಾರದಲ್ಲಿ ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 30 ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗವಹಿಸಲಿದ್ದು ಜೂನ್ 28ರಿಂದ ಜುಲೈ 1 ನೇ ತಾರೀಖಿನವರೆಗೆ ನಂಜನಗೂಡು ನಗರದ ವಿವಿಧ ಭಾಗಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಮನೆಮನೆಗೆ ತೆರಳಿ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ಕಾಲೇಜಿನ
ಪ್ರಾಂಶುಪಾಲರಾದ ಸಿ.ಆರ್. ದಿನೇಶ್ ರವರು ತಿಳಿಸಿದರು.
ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
