ಬೆಂಗಳೂರು: ಜಂತರ್ ಮಂತರ್ನಲ್ಲಿ ಸೋನಂ ವಾಂಗ್ಚುಕ್ ಅವರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ದೌರ್ಜನ್ಯದಿಂದ ಹತ್ತಿಕ್ಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಇತ್ತೀಚಿನ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅದರ ಪರಿಣಾಮವಾಗಿ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಹಾದಿ ಹಿಡಿದ ದುರಂತದ ಹಿನ್ನೆಲೆಯಲ್ಲಿ, ಸಾರ್ವಜನಿಕ ಜೀವನದಲ್ಲಿ ಹೊಣೆಗಾರಿಕೆ ಮತ್ತು ಉತ್ತರದಾಯಿತ್ವವನ್ನು ಸ್ಥಾಪಿಸಬೇಕೆಂಬ ಉದ್ದೇಶದಿಂದ ಸೋನಂ ವಾಂಗ್ಚುಕ್ ಅವರು ಪ್ರತಿಭಟನೆ ನಡೆಸುತ್ತಿದ್ದರು. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬುದು ಅವರ ಪ್ರಮುಖ ಆಗ್ರಹವಾಗಿತ್ತು.
ಆದರೆ, ವಿದ್ಯಾರ್ಥಿಗಳ ಭವಿಷ್ಯದ ಪರವಾಗಿ ಧ್ವನಿ ಎತ್ತಿದ ವ್ಯಕ್ತಿಯ ಬಾಯಿಗೆ ಬೀಗ ಹಾಕಲು ಕೇಂದ್ರ ಸರ್ಕಾರ ಮುಂದಾಗಿರುವುದು ಅತ್ಯಂತ ದುರದೃಷ್ಟಕರ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು. ಅದನ್ನು ಪೊಲೀಸ್ ಬಲದಿಂದ ಹತ್ತಿಕ್ಕುವುದು ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ ಎಂದು ಅವರು ಟೀಕಿಸಿದ್ದಾರೆ.
ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಲಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಕ್ಷವು ಸಂಪೂರ್ಣ ಬೆಂಬಲ ನೀಡಲಿದ್ದು, ನೂರಾರು ಕಾರ್ಯಕರ್ತರು ಭಾಗವಹಿಸಿ ಸೋನಂ ವಾಂಗ್ಚುಕ್ ಅವರೊಂದಿಗೆ ನಾವೆಲ್ಲರೂ ಇದ್ದೇವೆಂಬ ಐಕ್ಯತೆಯನ್ನು ಪ್ರದರ್ಶಿಸಲಿದ್ದೇವೆ. ಕೇಂದ್ರ ಸರ್ಕಾರವು ತನ್ನ ದಮನಕಾರಿ ನೀತಿಯನ್ನು ಕೈಬಿಟ್ಟು, ವಿದ್ಯಾರ್ಥಿಗಳು ಮತ್ತು ನಾಗರಿಕರ ಧ್ವನಿಯನ್ನು ಗೌರವಿಸಬೇಕು ಎಂದು ಡಾ. ಸತೀಶ್ ಕುಮಾರ್ ಆಗ್ರಹಿಸಿದ್ದಾರೆ.
