ಮೈಸೂರು: ಹೋರಾಟ ನಿರತ ವಿದ್ಯಾರ್ಥಿ-ಯುವಜನರ ಮೇಲೆ ತೀವ್ರ ನಿರ್ಲಕ್ಷ್ಯ ವಹಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಎಐಡಿಎಸ್ಒ ನೇತೃತ್ವದಲ್ಲಿ ನಗರದ ಹಳೆ ಡಿಸಿ ಕಚೇರಿ ಎದುರು ಕೆಂಪು ಕಾರ್ಡ್ ಚಳವಳಿ ನಡೆಸಲಾಯಿತು.
ಎನ್.ಟಿ.ಎ ಅನ್ನು ರದ್ದುಪಡಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಮತ್ತು ಸಾರ್ವಜನಿಕ ಶಿಕ್ಷಣವನ್ನು ಉಳಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಎಐಡಿಎಸ್ಒ ಜಿಲ್ಲಾ ಅಧ್ಯಕ್ಷೆ ಚಂದ್ರಕಲಾ ಅವರು, ಜುಲೈ 20ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಸೇರಿದ್ದ ಸಾವಿರಾರು ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಮತ್ತು ಶಾಕ್ ಬ್ಯಾಟನ್ಗಳಿಂದ ದಾಳಿ ನಡೆಸಿದ್ದಾರೆ. ಇದರಿಂದ ನೂರಾರು ಯುವಕರು ಗಾಯಗೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಸುರಕ್ಷತಾ ಕಾಯ್ದೆಯಡಿ ಪ್ರತಿಭಟನಾಕಾರರನ್ನು ಬಂಧಿಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿರುವುದು ಪ್ರಜಾಪ್ರಭುತ್ವಕ್ಕೆ ಪೆಟ್ಟು ನೀಡಿದೆ. ಆದರೆ ಅನ್ಯಾಯದ ವಿರುದ್ಧದ ಜನ ಚಳವಳಿಗಳ ಮೇಲಿನ ಇಂತಹ ದಾಳಿಗಳು ಇತಿಹಾಸದಲ್ಲಿ ನೆಲಕಚ್ಚಿವೆ ಎಂದು ಎಚ್ಚರಿಸಿದರು.
ಸಾಮಾಜಿಕ ಹೋರಾಟಗಾರ ಉಗ್ರ ನರಸಿಂಹೇಗೌಡ ಮಾತನಾಡಿ, ಇಂದು ಎಲ್ಲಾ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಿದೆ. ಇಡೀ ಶಿಕ್ಷಣ ವ್ಯವಸ್ಥೆ ಕೋಚಿಂಗ್ ಮಾಫಿಯಾದ ಕೈಗೊಂಬೆಯಾಗಿದೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ, ವಿಶೇಷವಾಗಿ ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಧ್ಯಾಪಕಿ ಲತಾ ಮೈಸೂರು ಅವರು ಮಾತನಾಡಿ, ನೀಟ್ ಹಗರಣದ ವಿರುದ್ಧ ನಡೆಯುತ್ತಿರುವ ಈ ಹೋರಾಟ ಮತ್ತೊಂದು ಸ್ವಾತಂತ್ರ್ಯ ಚಳವಳಿಯ ಭಾವನೆ ನೀಡುತ್ತಿದೆ. ನೀಟ್ ಮೂಲಕ ದೊಡ್ಡ ಲಾಭದ ಮಾರುಕಟ್ಟೆ ಸೃಷ್ಟಿಸಿರುವ ಕಾರ್ಪೋರೇಟ್ ಕುಳವನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಿಕಾ, ಹೇಮಾ, ಅಂಜಲಿ, ನಂದೀಶ್ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
