ಬೆಂಗಳೂರು: ಇತಿಹಾಸವನ್ನು ಓದಿದರೆ ಮಾತ್ರ ಇತಿಹಾಸವನ್ನು ಸೃಷ್ಟಿಸಲು ಸಾಧ್ಯ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್. ಬಾಲಾಜಿ ತಿಳಿಸಿದರು.
ಬೆಂಗಳೂರಿನ ನಂದಿನಿ ಬಡಾವಣೆಯ ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ,ಅವರು ಮಾತನಾಡಿದರು.
ನಮ್ಮ ದೇಶಭಕ್ತರು ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಋಣವನ್ನು ತೀರಿಸುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ. ದೇಶದ ಐಕ್ಯತೆ, ಅಖಂಡತೆ ಮತ್ತು ಸಮಗ್ರತೆಗಾಗಿ ದುಡಿದ ಮಹನೀಯರನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಮತ್ತು ಯುವಜನರು ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಹೆಚ್ಚು ಹೆಚ್ಚು ಅಧ್ಯಯನ ಮಾಡುವುದರ ಜೊತೆಗೆ ದೇಶ ರಕ್ಷಣೆಗೆ ಸಜ್ಜಾಗಿರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಈ ಸಂಜೆ ಪತ್ರಿಕೆಯ ರಂಜಿತಾ ಪುರುಷೋತ್ತಮ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸಲು ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕೆಂದು ಮನವಿ ಮಾಡಿದರು.
ಉದ್ಯಮಿ ಸತ್ಯನಾರಾಯಣ ಮಾತನಾಡಿ, ಶಾಲಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಬೆಳೆಸುವ ವಿವಿಧ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳುವುದಾಗಿ ತಿಳಿಸಿದರು. ಇದೇ ವೇಳೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುಜಾತ ಅವರು ಸ್ವಾಗತಿಸಿದರು. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ್ ವಂದನಾರ್ಪಣೆ ಸಲ್ಲಿಸಿದರು.
ಮುಖ್ಯ ಶಿಕ್ಷಕರಾದ ಹೆಚ್.ಎನ್. ಬಸವಯ್ಯ, ಚಲಪತಿ, ಯುವ ಘಟಕದ ಮಾಗಡಿ ರಾಜೇಶ್, ಕನ್ನಡ ಪರ ಹೋರಾಟಗಾರ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
