ನಂಜನಗೂಡು: ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವವನ್ನು ರಾಷ್ಟ್ರ ಧ್ವಜಾರೋಹಣ ಹಾಗೂ
ದೇಶಭಕ್ತಿ, ರಾಷ್ಟ್ರಾಭಿಮಾನದೊಂದಿಗೆ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ದೇಶದ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ದೇಶದ ಏಕತೆ, ಸಮಗ್ರತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಂಗಸ್ವಾಮಿ ಅವರು ಮುಖ್ಯ ಭಾಷಣಕಾರರಾಗಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಉಪ ತಹಸೀಲ್ದಾರ್ ಜಗದೀಶ್ ಅವರು ಭಾಗವಹಿಸಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು, ಪ್ರಾಮಾಣಿಕತೆ, ಸೇವಾ ಮನೋಭಾವ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್. ಲಿಂಗಣ್ಣಸ್ವಾಮಿ ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
