ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೌರಾಡಳಿತ ನಿರ್ದೇಶನಾಲಯದ ಆದೇಶದ ಮೇರೆಗೆ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮೈಸೂರು ಮಹಾನಗರ ಪಾಲಿಕೆ ಸೂಚಿಸಿದೆ.
ಸಾರ್ವಜನಿಕರು, ಮೂರ್ತಿ ತಯಾರಕರು, ಮಾರಾಟಗಾರರು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಕಡ್ಡಾಯವಾಗಿ ಸೂಚನೆ ಪಾಲಿಸಬೇಕು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ವಸ್ತುಗಳಿಂದ ತಯಾರಿಸಿದ ಗೌರಿ-ಗಣೇಶ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಣಿಕೆ, ಪ್ರದರ್ಶನ ಮತ್ತು ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ನೈಸರ್ಗಿಕ ಮಣ್ಣು/ಜೇಡಿ ಮಣ್ಣು ಹಾಗೂ ಪರಿಸರ ಸ್ನೇಹಿ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಪಿಒಪಿಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಬಾವಿ ಸೇರಿದಂತೆ ಯಾವುದೇ ಜಲಮೂಲಗಳಲ್ಲಿ ವಿಸರ್ಜನೆ ಮಾಡಬಾರದು,ಮೂರ್ತಿಗಳನ್ನು ಪಾಲಿಕೆಯಿಂದ ಗುರುತಿಸಲಾದ ನಿಗದಿತ ವಿಸರ್ಜನಾ ಸ್ಥಳಗಳು ಅಥವಾ ತಾತ್ಕಾಲಿಕ ವಿಸರ್ಜನಾ ತೊಟ್ಟಿಗಳಲ್ಲಿ ಮಾತ್ರ ವಿಸರ್ಜಿಸಬೇಕು.
ವಿಸರ್ಜನೆಗೂ ಮುನ್ನ ಹೂವು, ಹಾರ, ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಪ್ರತ್ಯೇಕಿಸಬೇಕು,
ಏಕಬಳಕೆಯ ಪ್ಲಾಸ್ಟಿಕ್, ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಕಪ್, ತಟ್ಟೆ, ಥರ್ಮೋಕೋಲ್ ಅಲಂಕಾರಿಕ ವಸ್ತುಗಳ ಬಳಕೆ ನಿಷೇಧ.
- ಸಾರ್ವಜನಿಕ ಸಮಿತಿಗಳು ಹಸಿ, ಒಣ ಮತ್ತು ಪೂಜಾ ತ್ಯಾಜ್ಯವನ್ನು ಪ್ರತ್ಯೇಕಿಸಿ ಪಾಲಿಕೆಯ ಸಿಬ್ಬಂದಿಗೆ ಹಸ್ತಾಂತರಿಸಬೇಕು ಎಂದು ಪಾಲಿಕೆ ಆದೇಶಿಸಿದೆ.
ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆಯ ತಂಡಗಳಿಂದ ನಗರದ ಮೂರ್ತಿ ತಯಾರಿಕಾ ಘಟಕಗಳು, ಗೋದಾಮುಗಳು ಮತ್ತು ಮಾರಾಟ ಮಳಿಗೆಗಳಲ್ಲಿ ಅನಿರೀಕ್ಷಿತ ತಪಾಸಣೆ ನಡೆಸಲಾಗುವುದು.
ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಮೂರ್ತಿ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಖರೀದಿಸಿ ಕೆರೆಗಳು ಮತ್ತು ಜಲಮೂಲಗಳ ಸಂರಕ್ಷಣೆಗೆ ಸಹಕರಿಸಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ.
