ಮೈಸೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಬಂದಿಗಳಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬಂದಿಗಳ ಅವಲಂಬಿತ ಕುಟುಂಬ ಸದಸ್ಯರ ಶಿಕ್ಷಣ, ಉದ್ಯೋಗ, ಕೌಶಲ್ಯ ತರಬೇತಿ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅಗತ್ಯತೆಗಳ ಕೊರತೆಯಾಗದಂತೆ ಮತ್ತು ಬಿಡುಗಡೆಯ ನಂತರ ಪುನಃ ಅಪರಾಧ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಜಾರಿಗೆ ತಂದಿರುವ NALSA-SPRUHA (Supporting Potential and Resilience of the Unseen, Heldback and Affected) Scheme, 2025 ಯೋಜನೆಯ ಅರಿವು ಕಾರ್ಯಕ್ರಮವನ್ನು ಕಾರಾಗೃಹದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕೇಂದ್ರ ಕಾರಾಗೃಹದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರಾಗೃಹದಲ್ಲಿರುವ ಎಲ್ಲಾ ಬಂದಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಾಗರಾಜ ಸಿದ್ರಪ್ಪ ಅಂಕಸದೊಡ್ಡಿ ಅವರು ಯೋಜನೆಯ ಅನುಕೂಲತೆಗಳ ಬಗ್ಗೆ ಅರಿವು ಮೂಡಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಪ್ಯಾನೆಲ್ ವಕೀಲ ಸುಂದರ್ ರಾಜ್ ಪಿ ಹಾಗೂ Socare Ind ಸಂಸ್ಥೆಯ ಕಾರ್ಯದರ್ಶಿ ಎಸ್ ಮಂಜು ಅವರು ಯೋಜನೆಯ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಧೀಕ್ಷಕ ಶೇಷಮೂರ್ತಿ, ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಜರಿದ್ದರು.
