ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸದೆ, ನೈಸರ್ಗಿಕ ಬಣ್ಣ ಬಳಸಿ ತಯಾರಿಸಿರುವ ಮಣ್ಣಿನ ಮೂರ್ತಿ ಪ್ರತಿಷ್ಠಾಪಿಸಬೇಕೆಂದು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಪರಿಸರ ಮಾಲಿನ್ಯ ತಡೆಗಟ್ಟಲು ಮೈಸೂರು ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಂಟಿಯಾಗಿ ಕಠಿಣ ಮಾರ್ಗಸೂಚಿ ಹೊರಡಿಸಿವೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣದ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಣಿಕೆ ಹಾಗೂ ಜಲಮೂಲಗಳಲ್ಲಿ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು
ಪಿಒಪಿ ವಿಗ್ರಹ ತಯಾರಿಸುವ ಹಾಗೂ ಮಾರಾಟ ಮಾಡುವ ಮಳಿಗೆಗಳಿಗೆ ವ್ಯಾಪಾರ ಪರವಾನಗಿ ನೀಡುವುದಿಲ್ಲ. ಹೊರ ರಾಜ್ಯಗಳಿಂದ ಜಿಲ್ಲೆಗೆ ಪಿಒಪಿ ಮೂರ್ತಿಗಳು ಸರಬರಾಜು ತಡೆಯಲು ಗಡಿ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು.
ಪಾಲಿಕೆ ಆರೋಗ್ಯಾಧಿಕಾರಿಗಳು ಹಾಗೂ ವಲಯ ಆಯುಕ್ತರ ನೇತೃತ್ವದ ಸಮಿತಿಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅನಧಿಕೃತ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪಿಒಪಿ ಮೂರ್ತಿಗಳನ್ನು ವಶಪಡಿಸಿಕೊಂಡು ದಂಡ ವಿಧಿಸಬೇಕು ಎಂದು ಸೂಚಿಸಿದರು.
ನದಿ, ಕೆರೆ, ಬಾವಿ ಸೇರಿದಂತೆ ನೈಸರ್ಗಿಕ ಜಲಮೂಲಗಳಲ್ಲಿ ಪಿಒಪಿ ಅಥವಾ ರಾಸಾಯನಿಕ ಬಣ್ಣದ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ. ಮನೆಗಳಲ್ಲಿ ಪೂಜಿಸುವ ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸಾರ್ವಜನಿಕ ಮೂರ್ತಿಗಳನ್ನು ಪಾಲಿಕೆ ನಿಗದಿಪಡಿಸುವ ಸಂಚಾರಿ ವಿಸರ್ಜನಾ ಟ್ಯಾಂಕರ್ ಅಥವಾ ಕೃತಕ ಹೊಂಡಗಳಲ್ಲಿ ಮಾತ್ರ ವಿಸರ್ಜಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಮಿತಿಗಳು ಸ್ಥಳೀಯ ಸಂಸ್ಥೆಗಳಾದ ಪಾಲಿಕೆ, ನಗರಸಭೆ, ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಲೇಬೇಕು ಎಂದು ಐಶ್ವರ್ಯ ತಿಳಿಸಿದರು.
ಪೆಂಡಾಲ್ ಗಳಲ್ಲಿ ಏಕಬಳಕೆ ಪ್ಲಾಸ್ಟಿಕ್, ಫ್ಲೆಕ್ಸ್ ಹಾಗೂ ಪ್ಲಾಸ್ಟಿಕ್ ತೋರಣಗಳ ಬಳಕೆ ನಿಷೇಧಿಸಲಾಗಿದೆ. ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮೂರ್ತಿ ವಿಸರ್ಜನೆಗೂ ಪೂಜಾ ಸಾಮಗ್ರಿಗಳ ಹಸಿಕಸವನ್ನು ಪ್ರತ್ಯೇಕಿಸಿ ಸ್ಥಳೀಯ ಸಂಸ್ಥೆಯ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಿ ಹಬ್ಬವನ್ನು ಶ್ರದ್ಧೆ ಮತ್ತು ಪರಿಸರ ಕಾಳಜಿಯಿಂದ ಆಚರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.
