ಮೈಸೂರು: ಯುವಜನರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವುದು ಮತ್ತು ಅವರ ಭವಿಷ್ಯಕ್ಕೆ ದಾರಿದೀಪವಾಗುವುದು ಈಗ ಅತ್ಯಂತ ಅಗತ್ಯವಾಗಿದೆ ಎಂದು ಸಚಿವ
ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆ ಕೇವಲ ಉದ್ಯೋಗ ಹುಡುಕುವವರಾಗದೆ, ತಮ್ಮ ಸಾಮರ್ಥ್ಯ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಸಚಿವರು ಸಲಹೆ ನೀಡಿದರು.
ಜನಸ್ಪಂದನ ಟ್ರಸ್ಟ್ ವತಿಯಿಂದ ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 8000 ಕ್ಕೂ ಹೆಚ್ಚು ಉದ್ಯೋಗವಕಾಶಗಳ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಸ್ಥಳೀಯವಾಗಿಯೇ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಇಂತಹ ಬೃಹತ್ ಮೇಳಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಮತ್ತು ಯುವಜನತೆಯ ಉಜ್ವಲ ಭವಿಷ್ಯಕ್ಕೆ ದೊಡ್ಡ ಮಟ್ಟದ ಪೂರಕ ವಾತಾವರಣ ನಿರ್ಮಿಸುತ್ತವೆ ಎಂದು ಹೇಳಿದರು.
ಪ್ರತಿಯೊಬ್ಬ ನಿರುದ್ಯೋಗಿ ಯುವಕ-ಯುವತಿಯರಿಗೂ ಸೂಕ್ತ ವೇದಿಕೆ ಒದಗಿಸಿ ಅವರ ಬದುಕಿಗೆ ನೆರವಾಗುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಸಚಿವರು ಟ್ರಸ್ಟ್ನ ಸೇವೆಯನ್ನು ಅಭಿನಂದಿಸಿ,
ಉದ್ಯೋಗಾಕಾಂಕ್ಷಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎಂ.ಕೆ. ಸೋಮಶೇಖರ್, ಶಾಸಕ ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಮೂರ್ತಿ, ಕೆಪಿಸಿಸಿ ವಕ್ತಾರರಾದ ಎಂ. ಲಕ್ಷ್ಮಣ್ ಹಾಗೂ ಹೆಚ್.ಎ. ವೆಂಕಟೇಶ್ ಉಪಸ್ಥಿತರಿದ್ದರು.
ಮಾಜಿ ಮಹಾಪೌರರಾದ ನಾರಾಯಣ್, ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಸಿದ್ದರಾಜು, ನಗರಪಾಲಿಕೆ ಮಾಜಿ ಸದಸ್ಯರಾದ ಜೆ. ಗೋಪಿ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.
