ನಂಜನಗೂಡು: ಶಿಕ್ಷಕರು ವಿದ್ಯಾರ್ಥಿಗಳ ಜೀವನಕ್ಕೆ ಜ್ಞಾನ, ಶಿಸ್ತು, ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳನ್ನು ನೀಡುವ ಮೂಲಕ ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಪ್ರಾಂಶುಪಾಲರಾದ ಸಿ.ಆರ್.ದಿನೇಶ್
ಅವರು ತಿಳಿಸಿದರು.
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಆರ್. ದಿನೇಶ್ ವಹಿಸಿ ಮಾತನಾಡಿ ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ಹೇಳಿದರು.
ಶಿಕ್ಷಕರು ಕೇವಲ ಪಾಠವನ್ನು ಬೋಧಿಸುವವರಲ್ಲ,ವಿದ್ಯಾರ್ಥಿಗಳ ಕನಸುಗಳಿಗೆ ದಾರಿ ತೋರಿಸುವ ಮಾರ್ಗದರ್ಶಕರು. ಒಬ್ಬ ಉತ್ತಮ ಶಿಕ್ಷಕರ ಪ್ರಭಾವ ವಿದ್ಯಾರ್ಥಿ ಜೀವನದಲ್ಲಿ ಸದಾ ಶಾಶ್ವತವಾಗಿರುತ್ತದೆ ಎಂದು ಆಂಗ್ಲ ಭಾಷಾ ಉಪನ್ಯಾಸಕ ರಂಗಸ್ವಾಮಿಯವರು ತಿಳಿಸಿದರು.
ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಗೌರವ ಹಾಗೂ ಕೃತಜ್ಞತೆ ಸಲ್ಲಿಸಿದರು. ಶಿಕ್ಷಕರ ಮಹತ್ವವನ್ನು ಸಾರುವ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಗುರುಗಳ ಮಾರ್ಗದರ್ಶನವೇ ವಿದ್ಯಾರ್ಥಿಗಳ ಯಶಸ್ಸಿನ ಮೊದಲ ಹೆಜ್ಜೆ ಎಂಬ ಸಂದೇಶವನ್ನು ಸಾರಲಾಯಿತು.
.
