ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ಸಿನಲ್ಲಿ ಸ್ವಚ್ಛತಾ ಸೇನಾನಿಗಳ ಸೇವೆ ಅನನ್ಯ ಎಂದು ಡಾ ಯತೀಂದ್ರ ಬಣ್ಣಿಸಿದರು.
ದಸರಾ ಸಂದರ್ಭದಲ್ಲಿ ನಗರಕ್ಕೆ ಆಗಮಿಸಿದ ಸುಮಾರು 10 ಲಕ್ಷಕ್ಕೂ ಅಧಿಕ ಪ್ರವಾಸಿಗರಿಗೆ ಸ್ವಚ್ಛ ಹಾಗೂ ಸುಂದರ ವಾತಾವರಣವನ್ನು ಕಲ್ಪಿಸುವಲ್ಲಿ ಪೌರಕಾರ್ಮಿಕರು, ಒಳಚರಂಡಿ (ಯುಜಿಡಿ) ಕಾರ್ಮಿಕರು ಹಾಗೂ ವಾಹನ ಚಾಲಕರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಮೈಸೂರು ನಗರದ ರಾಜೇಂದ್ರ ಕಲಾಮಂದಿರದಲ್ಲಿ ಇಂದು ದಸರಾ ಮಹೋತ್ಸವದ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸ್ವಚ್ಛತಾ ಸೇನಾನಿಗಳಿಗಾಗಿ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಭೋಜನಕೂಟವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮೈಸೂರು ದಸರಾ ಮಹೋತ್ಸವವು ವಿಶ್ವದ ಗಮನ ಸೆಳೆಯುವ ಪ್ರಮುಖ ಸಾಂಸ್ಕೃತಿಕ ಉತ್ಸವವಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಪ್ರವಾಸಿಗರು ನಗರಕ್ಕೆ ಆಗಮಿಸುವುದರಿಂದ ನಗರದ ಸ್ವಚ್ಛತೆ, ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದು ದೊಡ್ಡ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಯನ್ನು ನಮ್ಮ ಪೌರಕಾರ್ಮಿಕರು, ಯುಜಿಡಿ ಸಿಬ್ಬಂದಿ ಹಾಗೂ ವಾಹನ ಚಾಲಕರು ಹಗಲಿರುಳು ಶ್ರಮಿಸುವ ಮೂಲಕ ಸಮರ್ಥವಾಗಿ ನಿಭಾಯಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಮತ್ತು ಸಮರ್ಪಣಾ ಮನೋಭಾವಕ್ಕೆ ಅಭಿನಂದನೆ ಸಲ್ಲಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ನಗರವನ್ನು ಸ್ವಚ್ಛವಾಗಿಡುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ಶ್ರಮದಿಂದಲೇ ಮೈಸೂರು ನಗರವು ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗಿದೆ. ಅವರ ಸೇವೆಯನ್ನು ಗೌರವಿಸುವುದು ಹಾಗೂ ಅವರೊಂದಿಗೆ ಆತ್ಮೀಯತೆಯಿಂದ ಬೆರೆಯುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಡಾ.ಯತೀಂದ್ರ ತಿಳಿಸಿದರು.
ನಮ್ಮ ತಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ಉಪಾಹಾರ ಒದಗಿಸುವ ಕಾರ್ಯಕ್ರಮವನ್ನು ಆರಂಭಿಸಿದ್ದರ ಜೊತೆಗೆ, ಪೌರಕಾರ್ಮಿಕರ ಬದುಕಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅವರನ್ನು ಖಾಯಂಗೊಳಿಸುವ ಐತಿಹಾಸಿಕ ನಿರ್ಧಾರ ಕೈಗೊಂಡರು ಎಂದು ಸ್ಮರಿಸಿದರು.
ದಸರಾ ಮಹೋತ್ಸವದ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರು, ಯುಜಿಡಿ ಕಾರ್ಮಿಕರು ಹಾಗೂ ವಾಹನ ಚಾಲಕರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಬಳಿಕ ಸಚಿವರು ಪೌರಕಾರ್ಮಿಕರೊಂದಿಗೆ ಭೋಜನ ಸವಿದು ಅವರೊಂದಿಗೆ ಆತ್ಮೀಯವಾಗಿ ಸಮಯ ಕಳೆದರು.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಹರೀಶ್ ಗೌಡ, ಮಾಜಿ ಶಾಸಕರಾದ ಸೋಮಶೇಖರ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಮಾಜಿ ಮೇಯರ್ ನಾರಾಯಣ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
