ಬೆಂಗಳೂರು: ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲು ಉನ್ನತ ಮಟ್ಟದ ಸಮಿತಿಗಳ ರಚನೆ, ಅನಗತ್ಯ ಸಭೆಗಳು ಮತ್ತು ಕಾಲಹರಣದ ಮೂಲಕ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಧೋರಣೆಯನ್ನು ಆಮ್ ಆದ್ಮಿ ಪಕ್ಷ ಕರ್ನಾಟಕ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಪ್ರತಿ ಟನ್ ಕಬ್ಬಿಗೆ 4,500 ಬೆಲೆ ನೀಡುವ ನೀತಿಯನ್ನು ರಾಜ್ಯ ಸರ್ಕಾರ ತಕ್ಷಣ ಪ್ರಕಟಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಅವರು ಒತ್ತಾಯಿಸಿದ್ದಾರೆ.
ರೈತರ ಉತ್ಪಾದನಾ ವೆಚ್ಚ, ಕಾರ್ಮಿಕರ ಕೂಲಿ, ರಸಗೊಬ್ಬರ, ನೀರಾವರಿ ಮತ್ತು ಸಾಗಣೆ ವೆಚ್ಚಗಳನ್ನು ಪರಿಗಣಿಸಿ ಕಬ್ಬಿನ ಬೆಲೆಯನ್ನು ನಿರ್ಧರಿಸಬೇಕು. ಕೇಂದ್ರ ಸರ್ಕಾರ ನಿಗದಿಪಡಿಸುವ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ ಮಾತ್ರ ಸಾಕು ಎಂದು ರಾಜ್ಯ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳಬಾರದು. ರೈತರಿಗೆ ನ್ಯಾಯಯುತ ಬೆಲೆ ದೊರಕಿಸಲು ಅಗತ್ಯವಿದ್ದರೆ ರಾಜ್ಯ ಸರ್ಕಾರ ಹೆಚ್ಚುವರಿ ಆರ್ಥಿಕ ನೆರವು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಇಟ್ಟಿರುವ ಪಾವತಿ ಗಳನ್ನು ವಿಳಂಬವಿಲ್ಲದೆ ಕೂಡಲೇ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಆಮ್ ಆದ್ಮಿ ಪಕ್ಷವು ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳ ಪರವಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿಸಿಕೊಡುವುದೇ ಪಕ್ಷದ ಉದ್ದೇಶವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಹೊಣೆಗಾರಿಕೆಯನ್ನು ವರ್ಗಾಯಿಸಿಕೊಂಡು ರೈತರನ್ನು ಅಸಹಾಯಕರನ್ನಾಗಿ ಮಾಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.
ರೈತರ ಸಂಕಷ್ಟವನ್ನು ನಿರ್ಲಕ್ಷಿಸಿ ವಿಳಂಬದ ನೀತಿಯನ್ನು ಮುಂದುವರಿಸಿದರೆ, ಆಮ್ ಆದ್ಮಿ ಪಕ್ಷವು ಕಬ್ಬು ಬೆಳೆಗಾರರೊಂದಿಗೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ. ರೈತರಿಗೆ ನ್ಯಾಯ ದೊರಕುವವರೆಗೂ ಪಕ್ಷದ ಹೋರಾಟ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಅವರು ಎಚ್ಚರಿಸಿದ್ದಾರೆ.
