ಮೈಸೂರು: ಐತಿಹಾಸಿಕ ಮೈಸೂರು ಅರಮನೆಯ ಸುತ್ತಮುತ್ತಲಿನ ರಸ್ತೆಗಳಲ್ಲಿ ನಿಯಮಬಾಹಿರವಾಗಿ ನಡೆಯುತ್ತಿರುವ ಪ್ರೀ-ವೆಡ್ಡಿಂಗ್ ಫೋಟೋಶೂಟ್ಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಕನ್ನಡ ಕ್ರಾಂತಿದಳದ ರಾಜ್ಯಾಧ್ಯಕ್ಷರಾದ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಅವರು ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯನ್ನು ಪ್ರಬಲವಾಗಿ ಒತ್ತಾಯಿಸಿದ್ದಾರೆ.
ಇಂದು ಅರಮನೆ ರಸ್ತೆಯ ಬಳಿ ಪ್ರೀ-ವೆಡ್ಡಿಂಗ್ ಶೂಟಿಂಗ್ ಗಲಾಟೆ/ಗೊಂದಲದ ಹಿನ್ನೆಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ದುರಂತವಾಗಿ ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ಹೇಳಿದ್ದಾರೆ.
ಅರಮನೆಯಂತಹ ಪ್ರಮುಖ ಪ್ರವಾಸಿ ತಾಣಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ಯಾವುದೇ ಅನುಮತಿ ಇಲ್ಲದೆ, ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿ ಫೋಟೋಶೂಟ್ ಮಾಡಲಾಗುತ್ತಿದೆ.
ಇದು ಸಾರ್ವಜನಿಕರ ಮತ್ತು ವಾಹನ ಸವಾರರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ.
ಇಂದು ನಡೆದ ಅಪಘಾತದಲ್ಲಿ ಅಮಾಯಕ ಯುವತಿಯ ಪ್ರಾಣ ಹೋಗಿರುವುದು ಇಲಾಖೆಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಕಠಿಣ ಕ್ರಮದ ಅಗತ್ಯವಿದೆ.
ಅರಮನೆ ಆವರಣ ಮತ್ತು ಅದರ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆಗಳಲ್ಲಿ ಯಾವುದೇ ರೀತಿಯ ಪ್ರೀ-ವೆಡ್ಡಿಂಗ್ ಅಥವಾ ಕಮರ್ಷಿಯಲ್ ಶೂಟಿಂಗ್ಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
ನಿಯಮ ಉಲ್ಲಂಘಿಸಿ ಶೂಟಿಂಗ್ ಮಾಡುವವರ ವಿರುದ್ಧ ಮತ್ತು ಅದಕ್ಕೆ ಕಾರಣರಾಗುವ ಏಜೆನ್ಸಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಸೂಕ್ತ ಪೊಲೀಸ್ ಭದ್ರತೆಯನ್ನು ನಿಯೋಜಿಸಬೇಕು ಎಂದು ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವತಿಯ ಕುಟುಂಬಕ್ಕೆ ಸೂಕ್ತ ನ್ಯಾಯ ಹಾಗೂ ಪರಿಹಾರ ಸಿಗಬೇಕು. ಜಿಲ್ಲಾಡಳಿತ ಈ ಕೂಡಲೇ ಎಚ್ಚೆತ್ತುಕೊಂಡು ಅರಮನೆ ಸುತ್ತಮುತ್ತ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದರೆ, ಕನ್ನಡ ಕ್ರಾಂತಿದಳದ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಅವರು ಎಚ್ಚರಿಸಿದ್ದಾರೆ.
