(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮ
ಚಾಮರಾಜನಗರ: ವಕೀಲರ ದೌರ್ಜನ್ಯ ತಡೆ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ರುವ ವಕೀಲರ ಸಂಘದ ಕಚೇರಿ ಮುಂಭಾಗ ಜಮಾಯಿಸಿದ ವಕೀಲರು ಅಲ್ಲಿಂದ ಮೆರವಣಿಗೆ ಮೂಲಕ ನ್ಯಾಯಾಲಯದ ರಸ್ತೆ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕಾಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯ ದರ್ಶಿನಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಿದರು.
ವಕೀಲರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಸಾಮಾಜಿಕ ಮತ್ತು ಕಾನೂನಾತ್ಮಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ನೋಬಲ್ ವೃತ್ತಿಯಲ್ಲಿರುವ ವಕೀಲರಿಗೆ ಸೂಕ್ತ ಭದ್ರತೆ ಮತ್ತು ಬಲವಾದ ಕಾನೂನು ಇಲ್ಲವಾಗಿದೆ. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ವಕೀಲರೊಬ್ಬರನ್ನು ಹತ್ಯೆ ಮಾಡಲಾಗಿದೆ. ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟಲು ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ವಕೀಲರು ಆಗ್ರಹಿಸಿದರು.
ಪ್ರಸ್ತುತ ಜಾರಿಯಲ್ಲಿರುವ ವಕೀಲರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ನೆಪ ಮಾತ್ರಕ್ಕೆ ಇದೆ. ಆರೋಪಿಗಳ ವಿರುದ್ಧ ಬಲವಾದ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಈಗಾಗಲೇ ಜಾರಿ ಮಾಡಿರುವ ವಕೀಲರ ರಕ್ಷಣಾ ಕಾಯ್ದೆಯನ್ನು ಸಂಪೂರ್ಣವಾಗಿ ಬಲಪಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.
