ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರೀ ಅವಘಡ ಸಂಭವಿಸಿದೆ.
ಭಾರೀ ಮಳೆಯಾಗುತ್ತಿದ್ದು,ಇದರ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರು ದುರ್ಮರಣ ಅಪ್ಪಿದ್ದಾರೆ.
ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದಾರೆ.
ಇನ್ನೂ ಹಲವು ಕಾರ್ಮಿಕರು ಸಿಲುಕಿದ್ದು ರಕ್ಷಣಾ ಕಾರ್ಯ ಮುಂದುವರೆದಿದೆ. ಭಾರೀ ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಟ್ಟಡ ಕುಸಿಯುತ್ತಿದ್ದಂತೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕನೊಬ್ಬ ಪೆಟ್ಟು ಬಿದ್ದರೂ ಕಷ್ಟಪಟ್ಟು ಹೊರ ಬಂದು ಒಳಗೆ ಇನ್ನೂ ಕಾರ್ಮಿಕರು ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದ್ದಾನೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಭೈರತಿ ಸುರೇಶ್ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಗಮನಕ್ಕೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಡಿಸಿಪಿ ದೇವರಾಜ್ ಅವರಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.