ಮನುಭಾಕರ್, ಡಿ ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ

Spread the love

ನವದೆಹಲಿ: ಎರಡು ಒಲಿಂಪಿಕ್ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದ ಶೂಟರ್ ಮನುಭಾಕರ್, ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಕಿರಿಯ ಕ್ರೀಡಾಪಟು ಡಿ ಗುಕೇಶ್ ಸೇರಿದಂತೆ ನಾಲ್ವರು ಸಾಧಕರು ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ‌.

ಗುರುವಾರ ಕೇಂದ್ರ ಕ್ರೀಡಾ ಸಚಿವಾಲಯ ಖೇಲ್ ರತ್ನ ಪ್ರಶಸ್ತಿ ಗೌರವ ಪಡೆಯುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಭಾರತ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಪ್ರವೀಣ್ ಕುಮಾರ್ ಕೂಡ ಖೇಲ್ ರತ್ನ ಪ್ರಶಸ್ತಿಯನ್ನು ಪಡೆಯಲಿದ್ದಾರೆ.

ಖೇಲ್ ರತ್ನ ಭಾರತದ ಸಾಧಕ ಕ್ರೀಡಾಪಟುಗಳಿಗೆ ನೀಡುವ ಅತ್ಯುನ್ನತ ಗೌರವವಾಗಿದೆ. 17 ಪ್ಯಾರಾ ಅಥ್ಲೀಟ್‌ಗಳು ಸೇರಿದಂತೆ 32 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

22 ವರ್ಷದ ಮನು ಭಾಕರ್ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಗಳಲ್ಲಿ ಕಂಚು ಗೆದ್ದ ಸಾಧನೆ ಮಾಡಿದ್ದಾರೆ ಒಲಿಂಪಿಕ್ಸ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹಿರಿಮೆ ಅವರದು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡವನ್ನು ಮುನ್ನಡೆಸಿದ ಹರ್ಮನ್‌ಪ್ರೀತ್ ಸಿಂಗ್, ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತ ತಂಡಕ್ಕೆ ಐತಿಹಾಸಿಕ ಚಿನ್ನ ಗೆದ್ದು ಅತ್ಯಂತ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆದ ಡಿ ಗುಕೇಶ್, ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಟಿ64 ಚಾಂಪಿಯನ್‌ ಕಿರೀಟವನ್ನು ಮುಡಿಗೇರಿಸಿಕೊಂಡ ಪ್ಯಾರಾ ಹೈ-ಜಂಪರ್ ಪ್ರವೀಣ್ ಅವರುಗಳು ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗುದ್ದಾರೆ‌.