ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಸರ್ವರ ಸಹಕಾರ ಬೆಂಬಲದೊಂದಿಗೆ ನವೆಂಬರ್ ೧ರಂದು ನಗರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳು, ಕಲಾವಿದರು, ಅಧಿಕಾರಿಗಳು,ಮತ್ತಿತರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ಮಾತನಾಡಿ ಕನ್ನಡ ನಾಡು, ನುಡಿ ಕುರಿತು ವಿಶೇಷ ಕಾರ್ಯಕ್ರಮಗಳ ಮೂಲಕ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಈ ನಿಟ್ಟಿನಲ್ಲಿ ನಮ್ಮೆಲ್ಲರ ಸಂಪೂರ್ಣ ಸಹಕಾರ ಜಿಲ್ಲಾಡಳಿತಕ್ಕೆ ಇದೆ. ಗಡಿ ಭಾಗದಲ್ಲೂ ಒಂದು ದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು, ಬ್ಯಾಂಕುಗಳು, ಕೇಂದ್ರ ಕಚೇರಿಗಳಲ್ಲಿ ರಾಜ್ಯೋತ್ಸವ ಆಚರಣೆಯಾಗಬೇಕು ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಬೇಕು. ಕನ್ನಡಕ್ಕಾಗಿ ಹೋರಾಟ ಮಾಡಿದ ಜಿಲ್ಲೆಯ ಹೋರಾಟಗಾರರು, ಚಳವಳಿಗಾರರನ್ನು ಗುರುತಿಸಿ ಸನ್ಮಾನಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಯಲ್ಲಿ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಗೌರವಿಸಬೇಕು. ಸಂಜೆ ವೇಳೆ ಕನ್ನಡ ನಾಡು ನುಡಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಚಾಮರಾಜೇಶ್ವರ ದೇವಾಲಯದ ಉದ್ಯಾನವನದಲ್ಲಿ ಜೈಭುವನೇಶ್ವರಿ ವಿಗ್ರಹವಿದ್ದು, ಅಲ್ಲಿ ನಿರಂತರವಾಗಿ ಸ್ವಚ್ಚತೆ ಕಾಪಾಡಬೇಕು ಎಂದು ಮುಖಂಡರು ಸಲಹೆ ನೀಡಿದರು.
ಬ್ಯಾಂಕುಗಳಲ್ಲಿ, ಹೆದ್ದಾರಿ ಟೋಲ್ಗಳಲ್ಲಿ ಪ್ರಧಾನವಾಗಿ ಕನ್ನಡ ಭಾಷೆಯಲ್ಲಿ ನಾಮಫಲಕಗಳು ಇರಬೇಕು. ಜಿಲ್ಲೆಯಲ್ಲಿ ಆಂಗ್ಲಭಾಷೆಯಲ್ಲಿ ಪ್ರಧಾನವಾಗಿ ಬರೆಸಲಾಗಿರುವ ಫಲಕಗಳನ್ನು ಪರಿಶೀಲಿಸಿ ಕನ್ನಡ ಭಾಷೆಯಲ್ಲಿ ಎದ್ದು ಕಾಣುವಂತೆ ಬರೆಸಲು ಅಂಗಡಿ ಮಾಲೀಕರಿಗೆ ಸೂಚಿಸಬೇಕು. ನಗರದ ರಸ್ತೆಗಳಿಗೆ ಕನ್ನಡ ಸಾಹಿತಿಗಳು, ಕಲಾ ಸಧಕರು, ಕನ್ನಡಕ್ಕಾಗಿ ಹೋರಾಡಿದ ಮಹನೀಯರ ಹೆಸರುಗಳನ್ನು ಇಡಬೇಕು ಎಂಬುದು ಸೇರಿದಂತೆ ಇನ್ನಿತರ ಸಲಹೆಗಳನ್ನು ಮುಖಂಡರು ನೀಡಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಎಲ್ಲ ಕಾರ್ಯಕ್ರಮಗಳಿಗು ಸಂಘ ಸಂಸ್ಥೆಗಳ ಮುಖಂಡರು, ಸಮುದಾಯದ ಧುರೀಣರು ಜಿಲ್ಲಾಡಳಿತಕ್ಕೆ ಸಹಕರಿಸುತ್ತಿದ್ದಾರೆ. ಈ ಬಾರಿಯೂ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಕ್ರಮ ತೆಗೆದುಕೊಳ್ಳಲಿದ್ದೇವೆ. ಇದಕ್ಕಾಗಿ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಸಿದ್ದತೆಗೆ ಎಲ್ಲ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಕೂಡಲೇ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಕನ್ನಡ ಅನುಷ್ಠಾನಕ್ಕೆ ತುರ್ತಾಗಿ ನಿರ್ದೇಶನ ನೀಡಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕನ್ನಡದಲ್ಲಿ ಪ್ರಧಾನವಾಗಿ ನಾಮಫಲಕ ಇರುವ ಬಗ್ಗೆ ಪರಿಶೀಲಿಸಬೇಕು. ಲೋಪವಿದ್ದಲ್ಲಿ ಕೂಡಲೇ ಸೂಚನೆ ನೀಡಿ ಕನ್ನಡದಲ್ಲಿ ಪ್ರಧಾನವಾಗಿ ನಾಮಫಲಕ ಅಳವಡಿಸಿಕೊಳ್ಳಲು ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಮಾತನಾಡಿ ಕನ್ನಡಕ್ಕೆ ಅಗ್ರಸ್ಥಾನವಿದೆ. ಕನ್ನಡದಲ್ಲೇ ಪ್ರಧಾನವಾಗಿ ನಾಮಫಲಕಗಳು ಇರಬೇಕು. ಆಂಗ್ಲಭಾಷೆ ನಾಮಫಲಕ ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸರ ಗಮನಕ್ಕೆ ತರಬೇಕು. ಜೈ ಭುವನೇಶ್ವರಿ ವಿಗ್ರಹವಿರುವ ಸ್ಥಳದಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮರಾ ಅಳವಡಿಸಬೇಕು. ಇದರಿಂದ ಆ ಪ್ರದೇಶದಲ್ಲಿ ನಿಗಾ ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಡಾ. ಮಂಜುನಾಥ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ಡಿವೈಎಸ್ಪಿ ಸ್ನೇಹರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
