ಶಿವಮೊಗ್ಗ, ಮಾ.1: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದಗಳೊಂದಿಗೆ ಮಾತನಾಡಿದ ಸಿಎಂ,ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು, ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದೆ, ಅದು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಭಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.
ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯದ್ದು, ಒಂದೆಡೆ ಶಾಂತಿ ಮಂತ್ರ ಪಠಿಸುವ ಆ ದೇಶ ಮತ್ತೊಂದೆಡೆ ಯುದ್ಧ ಮಾಡುತ್ತದೆ,ಅದು ತದ್ವಿರುದ್ಧ ನಿಲುವು ಹೊಂದಿದೆ, ಇದನ್ನು ಖಂಡಿಸುತ್ತೇನೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಿಎಂ ಪ್ರಾರ್ಥಿಸಿದರು.
ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ,
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಿದ್ದರಾಮಯ್ಯ ಮತ್ತೊಂದು ಪ್ರಶ್ನೆಗೆ ಸ್ಪಷ್ಟಪಡಿಸಿದರು.
