ಮೈಸೂರು, ಜುಲೈ.1: ಆಷಾಢ ಶುಕ್ರವಾರಗಳ ವಿಶೇಷ ಪೂಜೆಗಳ ಸಂಬಂಧ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಪೂರ್ವ ಸಿದ್ದತಾ ಸಭೆ ನಡೆಸಿದರು.
ಮೈಸೂರಿನ ಚಾಮುಂಡಿ ಬೆಟ್ಟದ ಸಭಾಂಗಣದಲ್ಲಿ ಆಷಾಢ ಶುಕ್ರವಾರಗಳ ಅಂಗವಾಗಿ ನಡೆಯಲಿರುವ ವಿಶೇಷ ಪೂಜಾ ಕಾರ್ಯಕ್ರಮಗಳ ಪೂರ್ವಸಿದ್ಧತೆ ಕುರಿತು ಸಚಿವ ಡಾ. ಯತೀಂದ್ರ ಅವರು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಆಷಾಢ ಶುಕ್ರವಾರಗಳ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ, ಸುಗಮ ದರ್ಶನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ಸಾರಿಗೆ, ಸಂಚಾರ ನಿಯಂತ್ರಣ, ಭದ್ರತೆ ಹಾಗೂ ತುರ್ತು ವೈದ್ಯಕೀಯ ಸೇವೆಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪೂಜಾ ಕಾರ್ಯಕ್ರಮಗಳು ಸುಗಮವಾಗಿ, ಶಿಸ್ತುಬದ್ಧವಾಗಿ ಹಾಗೂ ಸಾಂಪ್ರದಾಯಿಕವಾಗಿ ನೆರವೇರಲು ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
