ಬೆಂಗಳೂರು: ಕಾವೇರಿ ವಿಷಯದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ ವಾಗಿದೆ ಎಂದು ಪ್ರತಿಪಕ್ಷ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
15 ದಿನ 6 ಸಾವಿರ ಕ್ಯೂಸೆಕ್ ಎಂದರೆ 7.5 ಟಿಎಂಸಿ ಆಗುತ್ತದೆ, ನಾವು ಸಂಕಷ್ಟದಲ್ಲಿ ಇರುವಾಗ ನೀರು ಬಿಡುಗಡೆ ಅಸಾಧ್ಯ
ತಕ್ಷಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ವಾಸ್ತವ ಸ್ಥಿತಿ ಮನವರಿಕೆ ಮಾಡಬೇಕು ಎಂದು ಟ್ವೀಟ್ ಮಾಡಿ ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ
ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ನಿರ್ದೇಶನ ನೀಡಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಟೀಕಿಸಿದ್ದಾರೆ
ಕರ್ನಾಟಕದ ಕಾವೇರಿ ಕಣಿವೆ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳ ನೀರಿನ ಲಭ್ಯತೆಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದು ಕೇವಲ ಆಡಳಿತಾತ್ಮಕ ಲೋಪವಲ್ಲ; ಕರ್ನಾಟಕದ ಜಲ ಹಕ್ಕುಗಳನ್ನು ರಕ್ಷಿಸುವಲ್ಲಿ ಸರ್ಕಾರ ತೋರಿದ ಗಂಭೀರ ನಿರ್ಲಕ್ಷ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿ ವಾಸ್ತವ ಸ್ಥಿತಿ ಮನವರಿಕೆ ಮಾಡಬೇಕು. ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರು ಈ ವೈಫಲ್ಯದ ಹೊಣೆ ಹೊತ್ತು ರಾಜ್ಯದ ಜನರಿಗೆ ಉತ್ತರ ನೀಡಬೇಕು. ಪ್ರಾಧಿಕಾರದ ಮುಂದೆ ಕರ್ನಾಟಕದ ಪರ ಯಾವ ಅಂಶಗಳನ್ನು ಮಂಡಿಸಲಾಯಿತು? ರಾಜ್ಯದ ಜಲಾಶಯಗಳ ನೈಜ ಸ್ಥಿತಿಯ ವರದಿಯನ್ನು ಸಲ್ಲಿಸಲಾಗಿತ್ತೇ? ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ ಬೆಂಗಳೂರಿನ ಕುಡಿಯುವ ನೀರು ಮತ್ತು ಕರ್ನಾಟಕದ ರೈತರ ಮೇಲೆ ಆಗುವ ಪರಿಣಾಮವನ್ನು ಸಮರ್ಪಕವಾಗಿ ವಿವರಿಸಲಾಗಿತ್ತೇ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಪ್ರತಿಪಕ್ಷ ನಾಯಕ ಆಗ್ರಹಿಸಿದ್ದಾರೆ.
ರಾಜ್ಯದ ಹಿತಾಸಕ್ತಿ ಕಾಪಾಡಲು ಪ್ರಾಧಿಕಾರದ ಮುಂದೆ ಸರ್ಕಾರ ಮಂಡಿಸಿದ ದಾಖಲೆಗಳು ಯಾವುವು? ಅವುಗಳನ್ನು ಸಾರ್ವಜನಿಕಗೊಳಿಸಬೇಕು?
ಜಲಾಶಯಗಳ ಲೈವ್ ಸ್ಟೋರೇಜ್, ಒಳಹರಿವು ಮತ್ತು ಮುಂದಿನ ತಿಂಗಳ ನೀರಿನ ಅಗತ್ಯದ ವೈಜ್ಞಾನಿಕ ಲೆಕ್ಕಾಚಾರವನ್ನು ಏಕೆ ಪರಿಣಾಮಕಾರಿಯಾಗಿ ಮಂಡಿಸಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ರಾಜ್ಯದ ಪರ ವಾದ ಮಂಡಿಸಿದ ತಾಂತ್ರಿಕ ಮತ್ತು ಕಾನೂನು ತಂಡದ ಕಾರ್ಯವೈಖರಿಯ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು
ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಪಕವಾಗಿ ಮಂಡಿಸುವಲ್ಲಿ ಯಾರಿಂದ ಲೋಪವಾಗಿದೆ ಎಂಬುದನ್ನು ಗುರುತಿಸಿ ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
ಮುಂದಿನ ದಿನಗಳಲ್ಲಿ ಯಾವುದೇ ನೀರು ಬಿಡುಗಡೆ ಆದೇಶ ಬರುವ ಮುನ್ನವೇ ರಾಜ್ಯದ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಲು ಶಾಶ್ವತ ಕಾವೇರಿ ತಾಂತ್ರಿಕ-ಕಾನೂನು ಕಾರ್ಯತಂತ್ರ ರೂಪಿಸಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.
ಸರ್ಕಾರ ಕೂಡಲೇ ಪ್ರಾಧಿಕಾರದ ಮುಂದೆ ಪುನರ್ಪರಿಶೀಲನೆಗೆ ಒತ್ತಾಯಿಸಿ, ಅಗತ್ಯವಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗಬೇಕು. ಕರ್ನಾಟಕದ ನೀರಿನ ಮೇಲೆ ಮೊದಲ ಹಕ್ಕು ಕರ್ನಾಟಕದ ಜನರದ್ದು ಎಂಬ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ಮತ್ತು ನಿರ್ದಾಕ್ಷಿಣ್ಯವಾಗಿ ಪ್ರತಿಪಾದಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ.
