ಮದ್ಯ,ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮುಖ್ಯ: ಅಯೂಬ್ ಖಾನ್

ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಅತೀ ಮುಖ್ಯವಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು.

ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಹೇಳಿದರು.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಜನರಲ್ಲಿ‌ ಅರಿವು ಮೂಡಿಸಲು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಿರ್ಮಿಸಿರುವ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಹಾಗೂ ವಿಶೇಷವಾಗಿ ದೇಶದ ಮುಂದಿನ ಜವಾಬ್ದಾರಿಯುತ ಪ್ರಜೆಗಳಾದ ವಿದ್ಯಾರ್ಥಿಗಳಲ್ಲಿ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ, ಪ್ರಸ್ತುತ ಮುಖ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಜಾಗೃತಿ ಮಳಿಗೆ ಬಹಳ ಅರ್ಥಪೂರ್ಣವಾಗಿದೆ. ಮಳಿಗೆಯಲ್ಲಿ ಅನಾವರಣಗೊಳಿಸಿರುವ ವಿಷಯಗಳು, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಸೇರಿದಂತೆ ಸಮಾಜದಲ್ಲಿ ಉತ್ತುಂಗ ಸ್ಥಾನದಲ್ಲಿರುವ ಗಣ್ಯರ ಜಾಗೃತಿ ಸಂದೇಶ, ಸಮಾಜದಲ್ಲಿ ಗಟ್ಟಿಯಾಗಿ ಬೇರೂರಲು ಪ್ರಯತ್ನಿಸುತ್ತಿರುವ ದುಷ್ಟ ಚಟಗಳನ್ನು ನಿಯಂತ್ರಿಸುವ ಸಂಬಂಧ ಒಳ್ಳೆಯ ಕಾರ್ಯವಾಗಿದೆ ಎಂದು ‌ಶ್ಲಾಘಿಸಿದರು.

ಎಕ್ಸಿಬಿಷನ್ ಬರುವ ಪ್ರತಿಯೊಬ್ಬರೂ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಳಿಗೆಗೆ ಭೇಟಿ ನೀಡಬೇಕು ಮತ್ತು ಇಲ್ಲಿ ಅನಾವರಣಗೊಳಿಸಿರುವ ಮಾಹಿತಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದರಿಂದ ಮದ್ಯ ಮತ್ತು ಮಾದಕವಸ್ತುಗಳಿಂದ ಕುಟುಂಬ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮಾಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಇದೇ ವೇಳೆ ಅಯೂಬ್ ಖಾನ್ ಅವರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಪ್ರಕಟಿಸಿರುವ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪುಸ್ತಕ ಮತ್ತು ಮಡಕೆ ಪತ್ರವನ್ನು ಬಿಡುಗಡೆ ಗೊಳಿಸಿದರು.

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಮಹೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.