ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಕೃಷ್ಣ ಮೇಲ್ದಂಡೆ ಯೋಜನೆ ಹಂತ ಮೂರರ ಭೂ ಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿಎಂ ಮಾತನಾಡಿದರು.
ಈ ಭಾಗದ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರು ದಿವಂಗತರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಸಿಎಂ ತಿಳಿಸಿದರು.
ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆಯಾಗಲು ಹೆಚ್.ವೈ.ಮೇಟಿಯವರೇ ಕಾರಣ. ಮೆಡಿಕಲ್ ಕಾಲೇಜ್ ಸ್ಥಾಪಿಸಲು 2025ರ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಇಂದು ಶಂಕುಸ್ಥಾಪನೆಗೊಳ್ಳುತ್ತಿದೆಯೇ ಹೊರತು, ಉಪಚುನಾವಣೆಯ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ, ಅನೇಕ ಜಿಲ್ಲೆಗಳನ್ನು ಅಭಿವೃದ್ಧಿಗೊಳಿಸುವ ದಿಸೆಯಲ್ಲಿ ಹಲವು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಳನ್ನು ಮಾಡಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಹಾಗೂ ಟ್ರಾಮಾ ಸೆಂಟರ್ ಗಳ ಸ್ಥಾಪನೆಯ ಉದ್ದೇಶವಿದ್ದು, ಈಗಾಗಲೇ ಸುಮಾರು 25 ಜಿಲ್ಲೆಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ವರ್ಷ ಇಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದೆ, ಪ್ರತಿ ವರ್ಷ ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೆ 1.22 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲಿಲ್ಲ. ಜಾತಿ ಧರ್ಮಗಳ ಮಧ್ಯೆ ವೈಮನಸ್ಯ ತರುವುದು ಅವರ ದುರಾಲೋಚನೆಯಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಯುಕೆಪಿ ಯೋಜನೆಯ ವ್ಯಾಪ್ತಿಗೆ ಬರುವ 8 ಗ್ರಾಮಗಳಲ್ಲಿ 900 ಎಕರೆಗೆ 446 ಕೋಟಿ ರೂ. ಪರಿಹಾರವನ್ನು ಕೊಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ. ಕೇಂದ್ರಕ್ಕೆ ಹಲವು ಮನವಿಗಳ ನಂತರವೂ, ಯುಕೆಪಿ, ಮಹಾದಾಯಿ ಸೇರಿದಂತೆ ಹಲವು ನೀರಾವರಿ ಯೋಜನೆಗೆ ಬೇಕಾದ ಅಗತ್ಯ ಅನುಮತಿಗಳನ್ನು ಕೇಂದ್ರ ಸರ್ಕಾರ ಇದುವರೆಗೆ ನೀಡಿಲ್ಲ. ಆದರೆ ನಮ್ಮ ಸರ್ಕಾರ ಉತ್ತರ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.
