ಬಾಗಲಕೋಟೆ: ಮುಖ್ಯಮಂತ್ರಿ ಸೇರಿದಂತೆ ಯಾರೇ ಬಂದರೂ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.
ನಗರದ ದೀಪಮ್ ಕಾಲೋನಿಯ ಸತ್ಯನಾರಾಯಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾರ್ಡ್ ನಂ. 1 ಮತ್ತು 3ರಲ್ಲಿ ವೀರಣ್ಣ ಚರಂತಿಮಠ ಅವರ ಪರವಾಗಿ ಮನೆ ಮನೆಗಳಿಗೆ ತೆರಳಿ ವಿಜಯೇಂದ್ರ ಮತಯಾಚನೆ ಮಾಡಿ ಮಾತನಾಡಿದರು.
ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ, ಬಾಗಲಕೋಟೆ ಮತಕ್ಷೇತ್ರ ರಣರಂಗವಾಗಿ ಬದಲಾಗಿದೆ. ಮತದಾರರು ಕಾಂಗ್ರೆಸ್ ದುರಾಡಳಿತಕ್ಕೆ ಸಂಪೂರ್ಣವಾಗಿ ಬೇಸತ್ತಿದ್ದಾರೆ ಇದನ್ನು ತಿಳಿದ ಸಿಎಂ ಸಿದ್ದರಾಮಯ್ಯ ಸೋಲುವ ಆತಂಕದಿಂದ ಹಳ್ಳಿಗಳಲ್ಲೇ ವಾಸ್ತವ ಹೂಡಲು ಹೊರಟಿದ್ದಾರೆ ಎಂದು ಟೀಕಿಸಿದರು.
ತಮ್ಮ ಸ್ಥಾನವನ್ನೂ ಮರೆತು ಅಲ್ಪಸಂಖ್ಯಾತರ ಓಲೈಕೆ ಮಾಡಲು ಹೊರಟ ಸಿಎಂ ಕುತಂತ್ರ ಬಿಜೆಪಿಯ ಮೇಲೆ ಪರಿಣಾಮ ಬೀರುವುದಿಲ್ಲ ನಮ್ಮ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಅಪಮಾನ ಮತ್ತು ಸುಳ್ಳುಕೇಸು ದಾಖಲು ಪ್ರಕರಣಗಳು ಹೆಚ್ಚಾಗಿವೆ. ಬಾಗಲಕೋಟೆ ಸೇರಿದಂತೆ ವಿವಿಧೆಡೆ ಹಿಂದೂ ಮೆರವಣಿಗೆಗಳ ಮೇಲೆ ಕಲ್ಲು ತೂರಾಟಗಳು ನಡೆಯುತ್ತಿವೆ.
ದೇಶ ದ್ರೋಹಿಗಳಿಗೆ ರಕ್ಷಣೆ ಕೊಡುತ್ತಿದ್ದಾರೆ. ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿದ್ದರೂ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರ ಅಭಿವೃದ್ಧಿ ಕಾರ್ಯಗಳ ಪ್ರಚಾರದ ಮುಂದೆ ಮುಖ್ಯಮಂತ್ರಿಗಳ ಪ್ರಚಾರ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪಿ.ಎಚ್ ಪೂಜಾರ ಶಾಸಕರಾದ ಜಗದೀಶ್ ಗುಡಗುಂಟಿ, ಎಂ.ಕೆ ಪಟ್ಟಣಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹಣಮಂತ ಮಾವಿಮರದ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
