ಹೆಚ್ ಎಂ ಪಿ ವಿ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ: ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಚೈನಾದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದೆ,ನಮ್ಮ ರಾಜ್ಯದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿವೆ ಎಂದು ಹೇಳಿದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪ್ರಾರಂಭಿಸುವಿರಾ ಎಂಬ ಪ್ರಶ್ನೆಗೆ,ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು,ಏನೆಲ್ಲಾ ಮುಂಜಾಗ್ರತೆ ತೆಗೆದುಕೊಳ್ಳಬೇಕೊ ಅದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸಚಿವ ಹೆಚ್ ಡಿ.ಕುಮಾರಸ್ವಾಮಿಯವರು ರಾಜ್ಯಸರ್ಕಾರದ ಕಮೀಷನ್ ಪ್ರಮಾಣ ಶೇ. 60 ಕ್ಕೆ ತಲುಪಿದೆ ಎಂದು ಹೇಳಿದ್ದಾರಲ್ಲಾ ಬಗ್ಗೆ ಪ್ರಶ್ನೆಗೆ, ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕಮೀಷನ್ ಆರೋಪವನ್ನು ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಯ್ಯನವರೆ ಮಾಡಿದ್ದರು ಎಂದು ಹೇಳಿದರು.