ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.
ಬೆಳಗಾವಿಯಲ್ಲಿ ಇಂದು ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ, ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು.
ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ ಅದಕ್ಕೆ ಏನೇನೊ ಹೇಳುತ್ತಾರೆ ಎಂದು ಟಾಂಗ್ ನೀಡಿದರು.
ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳವರು ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ತಿಳಿಸಿದರು.
ಬೆಳಗಾವಿಯ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಮಾಡಿ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ ಎಂದು ಸಿಎಂ ಹೇಳಿದರು.
ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಅವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ.
ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.