ಬೆಂಗಳೂರು: ಕೂಡಲೇ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.
ಸರ್ಕಾರ ತಕ್ಷಣ ಇದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಅಶೋಕ್ ಎಚ್ಚರಿಸಿದ್ದಾರೆ.
ಈ ಕುರಿತು ಅವರು ಮಾಧ್ಯಮ ಹೇಳಿಕೆ ಬಿಡುಗಡೆಗೊಳಿಸಿದ್ದು,ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಹೇಳಿದ್ದಾರೆ.
ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು,ತಮಗೆ ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಅವರು ಕೃಷಿ ಸಚಿವರು ಎಂಬುದನ್ನು ನೆನಪು ಮಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಈ ದರಿದ್ರ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರವಾಗಿರುವ ಸಚಿವರು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ರೈತರು ಕಷ್ಟ ಪಡುವಂತಾಗಿದೆ ಎಂದು ಆರ್.ಅಶೋಕ ಬೇಸರ ಪಟ್ಟಿದ್ದಾರೆ.
ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದೆ, ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ ಮಾಡುವ ಅನಿವಾರ್ಯ ಎದುರಾಗಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿಯಾದರೆ, ಇನ್ನು ಬೇರೆ ಜಿಲ್ಲೆಗಳ ಗತಿ ಕೇಳುವಂತೆಯೇ ಇಲ್ಲ ಎಂದು ಅಶೋಕ್ ಹೇಳಿದ್ದಾರೆ.