ಮೈಸೂರು,ಏ. 2: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್ ನಾಗೇಂದ್ರ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಏಪ್ರಿಲ್ 1ರಂದು ಮತ್ತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಹಾಲಿನ ದರ ಮತ್ತಷ್ಟು ದುಬಾರಿಯಾಗಿದೆ, ಮಂತ್ರಿಗಳು ಲೂಟಿಯಲ್ಲಿ ತೊಡಗಿದ್ದಾರೆ. ಮಂತ್ರಿಗಳ ಮೇಲೆ ಸಿಎಂ ಸಿದ್ದರಾಮಯ್ಯಗೆ ಹಿಡಿತವಿಲ್ಲದಂತಾಗಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಮುಸ್ಲಿಮರ ತುಷ್ಠೀಕರಣದಲ್ಲಿ ತೊಡಗಿದೆ, ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ಪ್ರತ್ಯೇಕವಾಗಿ ಮೀಸಲಾತಿ ಜಾರಿಗೊಳಿಸುವ ಮೂಲಕ ವಿಭಿನ್ನ ಧೋರಣೆ ತಳೆದಿದೆ. ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದೇ ರೀತಿ ಜನನ ಮರಣ ಪ್ರಮಾಣ ಪತ್ರಗಳನ್ನು ನೀಡಲು ಹೆಚ್ಚಿನ ಶುಲ್ಕ ನಿಗದಿ ಮಾಡಲಾಗಿದೆ. ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ ಎಂದು ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುತ್ತಿಲ್ಲ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಗೆ ಸೋಲಿನ ಭೀತಿ ಕಾಡುತ್ತಿದೆ ಹಾಗಾಗಿಯೇ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಟೀಕಿಸಿದರು.
ಪಾಲಿಕೆಗೆ ಚುನಾವಣೆ ನಡೆಸದೆ ಹೋದುದರಿಂದ ಕೇಂದ್ರದ ಅನುದಾನ ವಾಪಸ್ ಹೋಗಿದೆ,ಇದು ಇವರ ಆಡಳಿತ ಎಂದು ಎಲ್ ನಾಗೇಂದ್ರ ವ್ಯಂಗ್ಯವಾಡಿದರು.