ಕಾಂಗ್ರೆಸ್ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Spread the love

ಕೊಡಗು,ಏ.5: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಶಾಸಕರಾದ ಪೊನ್ನಣ್ಣ, ಮಂಥರ್‌ಗೌಡ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ಒತ್ತಾಯಿಸಿ ಕುಶಾಲನಗರ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಪ್ರೀತಂಗೌಡ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ವಿಜಯೇಂದ್ರ, ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸಲೇ ಬಾರದಾ ಎಂದು ಪ್ರಶ್ನಿಸಿದರು.

ಬಿಜೆಪಿ ಕಾರ್ಯಕರ್ತರು ಎದೆಗುಂದಬೇಡಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ, ರಣಹೇಡಿ, ಕೊಲೆಗಡುಕ ಸರ್ಕಾರದ ವಿರುದ್ಧ ಹೋರಾಡಿ ಎಂದು ಕರೆ ನೀಡಿದರು.

ಸಿದ್ದರಾಮಯ್ಯ ಕೊಲೆಗಡುಕ ಮುಖ್ಯಮಂತ್ರಿ. 16 ಬಜೆಟ್ ಮಂಡಿಸಿದ ಸಿಎಂ ಅಂತೆ, ಇವರ ಯೋಗ್ಯತೆಗೆ ಕೊಲೆಗಡುಕರ ಬೆಂಬಲವಾಗಿ ನಿಂತಿದ್ದಾರೆ. ಪೊಲೀಸ್ ಇಲಾಖೆ ಸರ್ಕಾರದ ಕೈಗೊಂಬೆ ಆಗಿದೆ. ಪೊಲೀಸ್ ಅಧಿಕಾರಿಗಳೇ ಬಹಳ ದಿನ ಕಾಂಗ್ರೆಸ್ ದರ್ಬಾರ್ ನಡೆಯಲ್ಲ. ಯೂನಿಫಾರ್ಮ್ ಗೆ ಗೌರವ ಕೊಟ್ಟು ನಡೆದುಕೊಳ್ಳಿ. ಪೊಲೀಸರು ಕಾನೂನು ಪ್ರಕಾರ ನಡೆಯದೇ ಇದ್ದರೆ, ಪೊಲೀಸ್ ಠಾಣೆಗೆ ನುಗ್ಗಿ ಜನ ಬೆಂಕಿ ಹಚ್ಚುತ್ತಾರೆ ಹುಷಾರ್ ಎಂದು ಎಚ್ಚರಿಸಿದರು.

ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆ ಆಗಬೇಕು. ನಮಗೆ ಪೊಲೀಸರ ಮೇಲೆ ನಂಬಿಕೆ ಇಲ್ಲ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕೋಣ ಇದು ಭಂಡ ಸರ್ಕಾರ ಪೊಲೀಸರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆಯಿತು.

ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.